ಕೆ.ಎನ್.ಕೇಶವರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಹೋರಾಟ । ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಬಾವುಟಗಳನ್ನು ಹಿಡಿದು ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣದ ವಿರುದ್ಧ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರವು ದೇಶದಲ್ಲಿ ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ., ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಸುಳ್ಳು ಎಫ್‌ಐಆರ್ ಅನ್ನು ತಕ್ಷಣವೇ ರದ್ದುಗೊಳಿಸಬೇಕು. ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಧಾರ್ಮಿಕ ಆಚರಣೆಗೆ ಜಾತಿಯ ಬಣ್ಣ ಹಚ್ಚಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂಬ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದರು. ಹಲ್ದ್ವಾನಿಯ ವಾಲ್ಮೀಕಿ ಸಮುದಾಯದ ಸದಸ್ಯ ಹಾಗೂ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನ ಕಾರ್ಯಕರ್ತ ಅಮಿತ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಗ್ಯಾರಂಟಿ ಅನುಷ್ಟಾನ ಯೋಜನೆಯ ಜಿಲ್ಲಾಧ್ಯಕ್ಷ ಯಲುವಹಳ್ಳಿ.ಎನ್.ರಮೇಶ್ ಮಾತನಾಡಿ, ಹಲ್ದ್ವಾನಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಡಿದ ಅಪಮಾನ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದರು. ಇದಕ್ಕೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ, ಸಮಾಜದಲ್ಲಿ ಜಾತಿ ಮತ್ತು ಧರ್ಮದ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಲಾಯಿತು ಎಂದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗಭೂಷಣ್, ರಕ್ಷಿತ್ ರೆಡ್ಡಿ, ಮುಖಂಡರಾದ ಗಂಗರೇ ಕಾಲುವೆ ನಾರಾಯಣಸ್ವಾಮಿ, ಅಡ್ಡಗಲ್ ಶೀಧರ್, ಕುಬೇರ್ ಅಚ್ಚು, ವೆಂಕಟ್, ಬಾಬಾಜಾನ್, ನಾಗೇಶ್ ರೆಡ್ಡಿ, ಶಾಹೀದ್, ಪೆದ್ದಣ್ಣ, ಗಂಗಾಧರ್, ಆದಿನಾರಾಯಣ, ಮಂಗಳಾಪ್ರಕಾಶ್, ನಾರಾಯಣಮ್ಮ, ಮಮತಾಮೂರ್ತಿ, ಹಮೀಮ್, ವಿನಯ್ ಬಂಗಾರಿ, ನಾಯನಹಳ್ಳಿ ನಾರಾಯಣಸ್ವಾಮಿ, ಶ್ರೀನಿವಾಸ್, ವೆಂಕಟೇಶ್, ಮತ್ತಿತರರು ಇದ್ದರು.