ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಂಗಳೂರಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯೋರ್ವಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಸಂಘನೆಯ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಬ್ಲಾಕ್‌ಮೇಲ್ ಮಾಡಿ, ಬೆದರಿಕೆ ಹಾಕಿದ್ದಾರೆ. ಬಂಧಿತ ಮೂವರಲ್ಲಿ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ಸೇರಿದ್ದಾರೆ. ಸಮಾಜದಲ್ಲಿ ಅಪಾರ ಗೌರವ ಹೊಂದಿರುವ ಶಿಕ್ಷಕ ವೃತ್ತಿಗೆ ಇವರು ಅಪಚಾರವೆಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಘೋರ ಘಟನೆಯು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಕವಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅಧಿಕಾರದ ದುರುಪಯೋಗದ ಸಮಸ್ಯೆಯನ್ನು ಪರಿಹರಿಸುವ ತುರ್ತು ಅಗತ್ಯ ಎತ್ತಿ ತೋರಿಸುತ್ತದೆ. ಯುವ ಮನಸ್ಸುಗಳನ್ನು ರೂಪಿಸುವ ಜವಾಬ್ದಾರಿ ಹೊಂದಿರುವ ಪ್ರಾಧ್ಯಾಪಕರು ಇಂತಹ ಹೇಯ ಕೃತ್ಯಗಳಲ್ಲಿ ಭಾಗಿಯಾಗಿರುವುದು ನಂಬಿಕೆಯ ಘೋರ ದ್ರೋಹವಾಗಿದೆ ಮತ್ತು ಇದು ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ನೋವಿನ ಅಪರಾಧಗಳ ಭಾಗವಾಗಿದೆ. ಕೂಡಲೇ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ವಿಧಿಸಬೇಕು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಘಟನೆಯ ಬಗ್ಗೆ ತ್ವರಿತ, ನಿಷ್ಪಕ್ಷಪಾತ ಮತ್ತು ಸಂಪೂರ್ಣ ತನಿಖೆ ನಡೆಸಿ, ಎಲ್ಲಾ ಅಪರಾಧಿಗಳನ್ನು ಕೂಡಲೇ ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆ ವಿಧಿಸಬೇಕು. ಆರೋಪಿ ಉಪನ್ಯಾಸಕರನ್ನು ತಕ್ಷಣವೇ ಅಮಾನತುಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಪ್ರಬಲ ಕುಂದುಕೊರತೆ ನಿವಾರಣಾ ಕಾರ್ಯಸಮಿತಿ ಸ್ಥಾಪಿಸುವುದು ಸೇರಿದಂತೆ, ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಿಂದ ವಿದ್ಯಾರ್ಥಿಗಳನ್ನು ರಕ್ಷಿಸಲು ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು. ಸಂತ್ರಸ್ತೆಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.