Protest condemning the rising number of rape cases in the country.
- ಶಿರಸ್ತೇದಾರ್ ರಮೇಶ್ ಕೋಳಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ
---
ಕನ್ನಡಪ್ರಭ ವಾರ್ತೆ ಸುರಪುರ
ದೇಶದ ವಿವಿಧ ಭಾಗಗಳಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಬುಧವಾರ ಸುರಪುರ ನಗರದ ಗಾಂಧಿ ವೃತ್ತದಲ್ಲಿ ನಾಗರಿಕರು ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಅತ್ಯಾಚಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಆರೋಪಿಗಳಿಗೆ ಕಾನೂನಿನಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸೋಮು ಎಂ. ಕಟ್ಟಿಮನಿ, ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ಇಂತಹ ಅಮಾನವೀಯ ಕೃತ್ಯ ಎಸಗುವವರ ವಿರುದ್ಧ ತ್ವರಿತ ಕಾನೂನು ಕ್ರಮ ಜರುಗಿಸಿ ಕಠಿಣ ಶಿಕ್ಷೆ ವಿಧಿಸಿದಾಗ ಮಾತ್ರ ಅಪರಾಧಿಗಳಲ್ಲಿ ಭಯ ಮೂಡಲಿದೆ. ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಠಿಣ ಶಿಕ್ಷೆಯಿಂದ ಮಾತ್ರ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ಬಳಿಕ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ರಮೇಶ್ ಕೋಳಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.