ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ, ಅವರನ್ನು ರಾಜ್ಯದಿಂದ ಹೊರಹಾಕಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಧಿಕೃತ ದಾಖಲೆಗಳಿಲ್ಲದೇ, ಮಾನ್ಯತೆ ರದ್ದಾಗಿರುವ ವೀಸಾಗಳು ಹಾಗೂ ಅಮಾನತಿನಲ್ಲಿರುವ ವೀಸಾಗಳನ್ನು ಹೊಂದಿಕೊಂಡು ರಾಜ್ಯ ಮತ್ತು ಜಿಲ್ಲೆಯಲ್ಲಿ ಅಕ್ರಮವಾಗಿ ವಾಸಿಸಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಬೇಕು.ಇದು ಅತ್ಯಂತ ಪ್ರಬಲವಾದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದೆ. ಹಾಗಾಗೀ ಅಂತಹ ವ್ಯಕ್ತಿಗಳನ್ನು ಪಟ್ಟಿಮಾಡಿ ಯಾವುದೇ ವಿಳಂಬ ಮಾಡದೇ ಈ ಕೂಡಲೇ ಕಾನೂನು ಬದ್ಧವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರ ಪಾಕಿಸ್ತಾನ ಪ್ರಜೆಗಳನ್ನು ಅವರ ದೇಶಕ್ಕೆ ಮರಳಿಸುವಂತೆ ಆದೇಶ ಹೊರಡಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಜಿಲ್ಲೆಯಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಹೊರಹಾಕಲು ಸರ್ಕಾರ ಹಿಂಜರಿಯುತ್ತಿದೆ. ಕೂಡಲೇ ಪಾಕ್ ಪ್ರಜೆಗಳನ್ನು ಗುರುತಿಸಿ, ಅವರ ದೇಶಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಎಂ.ಎಲ್.ಮುತ್ತೆನ್ನವರ, ಸಂದೀಪ್ ದೇಶಪಾಂಡೆ, ರಾಜಶೇಖರ್ ದೋಣಿ, ಈರಯ್ಯ ಖೋತ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಜಿಲ್ಲಾ ಉಪಾಧ್ಯಕ್ಷ ಮಾರುತಿ ಕೊಪ್ಪದ, ವಿನಯ್ ಕದಂ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ ಕೊಂಗಾಲಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.