ಕನ್ನಡಪ್ರಭ ವಾರ್ತೆ ಹಾಸನ
ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ನೌಕರರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸರ್ಕಾರ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತದ ಗಮನಕ್ಕೆ ತಂದರು. ಬಳಿಕ ಸಂಘದ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಂ ಶುಕ್ಲಾ ಅವರಿಗೆ ಮನವಿ ಸಲ್ಲಿಸಿದರು.
ಇದೇ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಪ್ರತಿಭಟನಾಕಾರರನ್ನು ಉದ್ದಶಿಸಿ ಮಾತನಾಡಿ, ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನೌಕರರಿಗೆ ಹಲವು ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಗ್ರಾಮ ಪಂಚಾಯಿತಿಗಳಿಗೆ ತೆರಿಗೆ ಸೇರಿದಂತೆ ವಿವಿಧ ಮೂಲಗಳಿಂದ ಆದಾಯ ಸಂಗ್ರಹವಾಗುತ್ತಿದ್ದರೂ, ನೌಕರರಿಗೆ ಬಾಕಿ ವೇತನ ನೀಡದಿರುವುದು ಅನ್ಯಾಯವಾಗಿದೆ ಎಂದರು. ಸರ್ಕಾರದ ಆದೇಶದಂತೆ ತುಟ್ಟಿ ಭತ್ಯೆ ಸೇರಿದಂತೆ ಕನಿಷ್ಠ ವೇತನವನ್ನು ನೌಕರರಿಗೆ ನೀಡಬೇಕು. ಬಾಕಿ ಉಳಿಸಿಕೊಂಡಿರುವ ವೇತನವನ್ನೂ ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅದೇ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ನೌಕರರನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಕೆಲವು ಕಡೆಗಳಲ್ಲಿ ಸರ್ಕಾರದ ನಿಯಮಾವಳಿಗಳನ್ನು ಬದಿಗೊತ್ತಿ ಅರ್ಹ ನೌಕರರನ್ನು ಕಡೆಗಣಿಸಿ ಹೊರಗಿನ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಅನ್ಯಾಯವಾಗುತ್ತಿದೆ. ನಿಯಮಾನುಸಾರ ಅರ್ಹ ನೌಕರರಿಗೆ ಹುದ್ದೆ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಆಗ್ರಹಿಸಿದರು. ಸೇವೆಯಲ್ಲಿದ್ದ ನೌಕರರು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬದ ಅರ್ಹ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವಲ್ಲಿಯೂ ವಿಳಂಬವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಕೆಲವು ನಿವೃತ್ತ ನೌಕರರು ಈಗಾಗಲೇ ಮೃತಪಟ್ಟಿದ್ದರೂ ಅವರ ಕುಟುಂಬಗಳಿಗೆ ಕೂಡ ಹಣ ಪಾವತಿಯಾಗದಿರುವುದು ನೋವಿನ ಸಂಗತಿ. ಈ ಬಗ್ಗೆ ತಕ್ಷಣ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಅನ್ಯಾಯಕ್ಕೊಳಗಾದ ನೌಕರರು ಅಥವಾ ಅವರ ಕುಟುಂಬಗಳಿಗೆ ಕಾನೂನುಬದ್ಧವಾಗಿ ಲಭ್ಯವಿರುವ ಪರಿಹಾರ ಹಾಗೂ ಉಪಧನವನ್ನು ವಿಳಂಬವಿಲ್ಲದೆ ಪಾವತಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ನೌಕರರು ಸೇವೆ ಸಲ್ಲಿಸುತ್ತಿದ್ದರೂ ಅವರ ಸೇವೆಗೆ ಜಿಲ್ಲಾ ಪಂಚಾಯಿತಿಯಿಂದ ಇನ್ನೂ ಅನುಮೋದನೆ ದೊರೆತಿಲ್ಲ. ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ನೌಕರರ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಕೂಡಲೇ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.
ಪ್ರತಿಭಟನಾಕಾರರ ಮನವಿ ಆಲಿಸಿದ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್‍ಯನಿರ್ವಹಣಾಧಿಕಾರಿ ಶುಭಂ ಶುಕ್ಲ ಪ್ರತಿಭಟನಾಗಾರರ ಉದ್ದೇಶಿಸಿ ಮಾತನಾಡಿ, ನಿಮ್ಮ ಎಲ್ಲಾ ಬೇಡಿಕೆಗಳನ್ನ ಆಲಿಸಿದ್ದು, ಜಿಲ್ಲಾ ಮಟ್ಟದಲ್ಲಿ ಆಗುವ ಸಮಸ್ಯೆಗಳನ್ನ ಬಗೆಹರಿಸಲಾಗುವುದು, ಉಳಿದ ಬೇಡಿಕೆಗಳ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.