-ಸುದ್ದಿಗೋಷ್ಠಿಯಲ್ಲಿ ಹನಮಂತ ಮನ್ನಾಪುರ, ವಿವಿಧ ಮುಖಂಡರು ಭಾಗಿ
ಕನ್ನಡಪ್ರಭವಾರ್ತೆ ರಾಯಚೂರು
ರಾಜ್ಯ ಸರ್ಕಾರ ಯಾವುದೇ ರೀತಿಯ ವಿಳಂಬ ಮಾಡದೇ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಆ.13 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಹನಮಂತ ಮನ್ನಾಪುರ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಶಕಗಳ ಕಾಲ ಹೋರಾಟ ನಡೆಸುತ್ತಾ ಬಂದಿದ್ದು ಅದರ ಫಲವಾಗಿ ಹಿಂದಿನ ಬಿಜೆಪಿ ಸರ್ಕಾರವು ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಚರ್ಚಿಸಿ ಜೆ.ಮಾಧುಸ್ವಾಮಿ ನೇತೃತ್ವದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು, ಒಳಮೀಸಲಾತಿ ಕಲ್ಪಿಸುವುದರ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ. ಇದೀಗ ಒಳಮೀಸಲಾತಿಯ ಜಾರಿ ವಿಚಾರ ರಾಜ್ಯ ಸರ್ಕಾರದ ಮುಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಯಾವುದೇ ರೀತಿಯ ವಿಳಂಬ ಧೋರಣೆಗಳನ್ನು ಅನುಸರಿಸದೇ ಒಳಮೀಸಲಾತಿ ಜಾರಿಗೆ ಮುಂದಾಗಬೇಕು ಎಂದು ಬೆಂಗಳೂರಿನ ಹೋರಾಟದ ಮುಖಾಂತರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಹೇಮರಾಜ ಅಸ್ಕಿಹಾಳ, ಆಂಜನೇಯ ಉಟ್ಕೂರು, ದೇವರಾಜ, ಅಬ್ರಾಹಂ ಕಮಲಾಪುರ, ಆಯಪ್ಪ ಗಧಾರ, ನರಸಿಂಹಲು ಸೇರಿ ಇತರರು ಇದ್ದರು.--------------------
ಚಿತ್ರ: ಹನಮಂತ ಮನ್ನಾಪುರ