ಕನ್ನಡಪ್ರಭವಾರ್ತೆ ಗುಂಡ್ಲುಪೇಟೆ
ಪಟ್ಟಣದ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಮಾತನಾಡಿ, ಕಳೆದ ಕೆಲ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಮಯದಲ್ಲಿ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರದ ಸಚಿವರು, ಶಾಸಕರು ಸಾಮಾಜಿಕ ಜಾಲ ತಾಣಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಹತ್ತು ಸಾವಿರ ಗೌರವ ಧನ ನೀಡಲಾಗುತ್ತಿದೆ ಎಂದು ಪ್ರಚಾರ ಮಾಡುತಿದ್ದಾರೆ. ಆದರೆ ಜೂನ್ ತಿಂಗಳು ಕಳೆದರೂ ನಮಗೆ ಗೌರವ ಧನ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.ಈ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ ಆಶಾ ಕಾರ್ಯಕರ್ತೆಯರಿಗೂ ಗೌರವ ಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ವಿವಿಧ ಕಾರಣಗಳನ್ನು ನೀಡಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಲು ರಾತ್ರೋರಾತ್ರಿ ಆದೇಶ ಹೊರಡಿಸುವ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದಕ್ಕೆ ಆಗುತ್ತಿಲ್ಲವೇಕೆ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರ ತಾಲೂಕು ಅಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ರಾಜಮ್ಮ, ಲಕ್ಷ್ಮಿದೇವಿ ಅಗತಗೌಡನಹಳ್ಳಿ ಸೇರಿದಂತೆ ಆಶಾ ಕಾರ್ಯಕರ್ತೆಯರ ಭಾಗವಹಿಸಿದರು.