- ಜೋಳದಾಳ್ ವೃತ್ತದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ । ಬಿಜೆಪಿ ಆಲ್ದೂರು ಮಂಡಲ, ಜೆಡಿಎಸ್ ಕಾರ್ಯಕರ್ತರು ಭಾಗಿಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಬಿದ್ದ ಪರಿಣಾಮ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಕೂಡಲೇ ರಸ್ತೆಗಳನ್ನು ದುರಸ್ಥಿಪಡಿಸಲು ಆಗ್ರಹಿಸಿ ಬುಧವಾರ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಜೋಳದಾಳ್ ವೃತ್ತದಲ್ಲಿ ಬಾಳೆಗಿಡ ನೆಟ್ಟು, ರಸ್ತೆ ತಡೆ ನಡೆಸಿ ವಿನೂತನ ಪ್ರತಿಭಟನೆ ನಡೆಸಿದರು.ಬಿಜೆಪಿ ಆಲ್ದೂರು ಮಂಡಲ ಹಾಗೂ ಜೆಡಿಎಸ್ ಪಕ್ಷದಿಂದ ಸರ್ಕಾರದ ಗಮನ ಸೆಳೆಯಲು ಆಯೋಜಿಸಲಾಗಿದ್ದ ರಸ್ತೆ ತಡೆ ಪ್ರತಿಭಟನೆಯಲ್ಲಿ ನೂರಾರು ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ರಸ್ತೆಗಳ ಗುಂಡಿ ಮುಚ್ಚಿಲ್ಲ. ಶೀಘ್ರವೇ ರಸ್ತೆಗಳ ಗುಂಡಿ ಮುಂಚಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಆಗ್ರಹಿಸಿದರು.ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕ್ಷೇತ್ರ ಪ್ರವಾಸ ಕೈಗೊಂಡು ಜನಸಾಮಾನ್ಯರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಇನ್ನು 15 ದಿನಗಳೊಳಗೆ ರಸ್ತೆಗಳನ್ನು ಅಭಿವೃದ್ಧಿಪಡಿಸದಿದ್ದರೆ ಇಡೀ ಮೂಡಿಗೆರೆ ಕ್ಷೇತ್ರ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ಪಂಚ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿ ಮತದಾರರಿಗೆ ಮೋಸ ಮಾಡುತ್ತಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಜೊತೆಗೆ ಕಾಡುಪ್ರಾಣಿಗಳ ದಾಳಿಯಿಂದ ಜನಸಾಮಾನ್ಯರು ತತ್ತರಿಸಿದ್ದು, ಜೀವ ಭಯದಲ್ಲಿದ್ದಾರೆಂದರು.ಪರಿಶಿಷ್ಟ ಜಾತಿ, ಪಂಗಡದ ಪರವಾಗಿ ಇದ್ದೆವೆಂದು ಹೇಳುವ ಸರ್ಕಾರ ಎಸ್‌ಸಿ, ಟಿಎಸ್‌ಪಿಯ ₹39 ಸಾವಿರ ಕೋಟಿ ಯನ್ನು ಅನ್ಯ ಉದ್ದೇಶಕ್ಕೆ ಬಳಸಿದೆ. ಇದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ಗೆ ಮಾಡಿದ ಅವಮಾನ. ದಲಿತರು ಮತ್ತು ಹಿಂದುಳಿದವರಿಗೆ ಮಾಡಿದ ಅಪಮಾನ ಎಂದು ಆರೋಪಿಸಿದರು.
ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಜೆ. ಸುರೇಶ್ ಮಾತನಾಡಿ, ರಸ್ತೆಗಳು ಗುಂಡಿ ಬಿದ್ದು ಅಪಘಾತ ಸೃಷ್ಟಿಸುವತ್ತ ಪರಿವರ್ತನೆ ಯಾಗಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸರ್ಕಾರ ಪರ್ಸಂಟೇಜ್‌ನಲ್ಲಿ ತೊಡಗಿರುವುದರಿಂದ ಅಭಿವೃದ್ಧಿಯಲ್ಲಿ ಶೂನ್ಯವಾಗಿದೆ. ಸರ್ಕಾರ ಮತ್ತು ಅರಣ್ಯ ಇಲಾಖೆ ಕಾಡುಪ್ರಾಣಿಗಳ ಹಾವಳಿ ತಡೆಯುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.ಬಿಜೆಪಿ ಮಂಡಲ ಅಧ್ಯಕ್ಷ ರವಿ ಬಸರವಳ್ಳಿ ಮಾತನಾಡಿ, ಗುಂಡಿಯಲ್ಲಿ ರಸ್ತೆ ಹುಡುಕುವ ಕೆಲಸ ನಡೆಯುತ್ತಿದ್ದು, ಇದರಿಂದ ಕೂಡಲೇ ಮುಕ್ತಿ ನೀಡಿ ಜನಸಾಮಾನ್ಯರ ಸಂಚಾರಕ್ಕೆ ಅನುಕೂಲ ಮಾಡಬೇಕೆಂದು ಆಗ್ರಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಎಲಿಕ್ಯಾಪ್ಟರ್‌ನಲ್ಲಿ ಓಡಾಡುತ್ತಿರುವುದರಿಂದ ರಸ್ತೆಗಳ ದುಸ್ಥಿತಿ ಅವರಿಗೆ ಅರ್ಥವಾಗುತ್ತಿಲ್ಲ. ರಸ್ತೆಗಳಲ್ಲಿ ಓಡಾಡಿದರೆ ಮಾತ್ರ ಅದರ ಅರಿವಾಗುತ್ತದೆ. ದುರಸ್ತಿ ವಿಳಂಭವಾದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಮುಖಂಡ ಕೆರಮಕ್ಕಿ ಮಹೇಶ್, ಜೆಡಿಎಸ್‌ನ ಎಚ್.ಎನ್ ಕೃಷ್ಣೇಗೌಡ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
13 ಕೆಸಿಕೆಎಂ 2ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿಪಡಿಸಲು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಚಿಕ್ಕಮಗಳೂರು ತಾಲೂಕಿನ ಜೋಳದಾಳ್ ವೃತ್ತದಲ್ಲಿ ಬುಧವಾರ ಬಾಳೆ ಗಿಡ ನೆಟ್ಟು ರಸ್ತೆ ತಡೆ ನಡೆಸಿ ವಿನೂತನ ಪ್ರತಿಭಟನೆ ನಡೆಸಿದರು.