ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರಣಿಗೆ ಮೂಲಕ ತೆರಳಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜನಪ್ರತಿನಿಧಿಗಳ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಜಮೀನುಗಳನ್ನು ಕಬಳಿಸಿ, ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ. ಪಾಲಿಕೆ ಕ್ರಮಕ್ಕೆ ಹೈಕೋರ್ಟ್ ಕೂಡ ತರಾಟೆಗೆ ತೆಗೆದುಕೊಂಡಿದೆ. ಅನಧಿಕೃತವಾಗಿ ಅನುದಾನ ಬಳಕೆ ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿ ಕುರಿತು ಆಡಿಟ್ ವರದಿ ಇಲ್ಲವೇ ಶ್ವೇತ ಪತ್ರ ಹೊರಡಿಸಬೇಕು. ಅನುದಾನ ದುರ್ಬಳಕೆ ಮಾಡಿಕೊಂಡಿರುವುರಿಂದ ಅಧಿಕಾರಿಗಳಿಂದಲೇ ನಷ್ಟ ವಸೂಲಿ ಮಾಡಬೇಕು. 15 ದಿನದೊಳಗೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ಶ್ರೀರಾಮಸೇನೆ ಹಿಂದೂಸ್ಥಾನ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡಸ್ಕರ್, ಸಂಜಯ ಶಿಂಧೆ, ಸುಧಾ ಭಾತಕಂಡೆ, ಕಿಶೋರಿ ಕುರ್ಮೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.