ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ನ ಆರೋಪಿ ಬಂಧಿಸಿಲು ಪ್ರತಿಭಟನೆ

KannadaprabhaNewsNetwork |  
Published : Nov 08, 2026, 01:45 AM IST
7ಎಚ್ಎಸ್ಎನ್10 :  | Kannada Prabha

ಸಾರಾಂಶ

ಬಾಳಗೋಡು ಗ್ರಾಮದ ಹಿಮಾ ಎಂಬ ಯುವತಿ, ನೌಶಾದ್ ಎಂಬ ಯುವಕನ ಪ್ರೀತಿ ಮತ್ತು ನಂಬಿಕೆಯ ನೆಪದಲ್ಲಿ ವಂಚನೆಗೆ ಒಳಗಾಗಿದ್ದು, ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಾನಸಿಕ ಕಿರುಕುಳ ನೀಡಿದ ಪರಿಣಾಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಏರೋನಾಟಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ಆಕೆಯ ಸಾವಿಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಶನಿವಾರ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.ತಾಲೂಕಿನ ಬಾಳಗೋಡು ಗ್ರಾಮದ ಹಿಮಾ ಎಂಬ ಯುವತಿ, ನೌಶಾದ್ ಎಂಬ ಯುವಕನ ಪ್ರೀತಿ ಮತ್ತು ನಂಬಿಕೆಯ ನೆಪದಲ್ಲಿ ವಂಚನೆಗೆ ಒಳಗಾಗಿದ್ದು, ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಾನಸಿಕ ಕಿರುಕುಳ ನೀಡಿದ ಪರಿಣಾಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಶಾಸಕ ಸಿಮೆಂಟ್‌ ಮಂಜು ಮಾತನಾಡಿ ನುಗ್ಗೆಹಳ್ಳಿ ಭಾಗದಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲೂ ಆರೋಪಿಗೆ ಜಾಮೀನು ದೊರೆತ ಬಳಿಕ ಸಂತ್ರಸ್ತೆಯ ಮನೆಗೆ ತೆರಳಿ ಬೆದರಿಕೆ ಹಾಕಿರುವ ಘಟನೆ ಗಮನಕ್ಕೆ ಬಂದಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಐಜಿಪಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಸಂತ್ರಸ್ತ ಯುವತಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದೇನೆ. ಮಹಿಳೆಯರ ಸುರಕ್ಷತೆಯ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಹಿಮಾ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿಶ್ವ ಹಿಂದೂ ಪರಿಷತ್ ಮುಖಂಡ ಮೈಪಾಲ್ ಮಾತನಾಡಿ, ಪ್ರೀತಿ ಸಹಜವಾದ ಭಾವನೆ. ಆದರೆ ಪ್ರೀತಿಯ ಹೆಸರಿನಲ್ಲಿ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಹೆಣ್ಣುಮಕ್ಕಳ ಮಾನಸಿಕ ನೆಮ್ಮದಿ ಹಾಗೂ ಬದುಕಿಗೆ ಧಕ್ಕೆ ತರುವ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳ ಗೌರವ ಮತ್ತು ಸುರಕ್ಷತೆ ಸಮಾಜದ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದರು. ಹಿಮಾ ಪ್ರಕರಣ ಸೇರಿದಂತೆ ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪಗಳ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಸಾಕ್ಷ್ಯಗಳನ್ನು ದುರ್ಬಲಗೊಳಿಸುವ ಅಥವಾ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಮುಚ್ಚಿಹಾಕುವ ಪ್ರಯತ್ನಗಳು ನಡೆಯಬಾರದು. ಸಂತ್ರಸ್ತೆಯರಿಗೆ ನ್ಯಾಯ ದೊರಕಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಹಿಮಾ ಪ್ರಕರಣಕ್ಕೆ ನ್ಯಾಯ ದೊರಕಿಸುವುದು ಕೇವಲ ಒಂದು ಕುಟುಂಬದ ಹೋರಾಟವಲ್ಲ, ಮಹಿಳೆಯರ ಸುರಕ್ಷತೆ ಮತ್ತು ಗೌರವದ ಕುರಿತಾದ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಈ ನಿಟ್ಟಿನಲ್ಲಿ ನವೆಂಬರ್ 13 ಮತ್ತು 14ರಂದು ಸಕಲೇಶಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು, ವರ್ತಕರು ಹಾಗೂ ಹಿಂದೂ ಸಮಾಜದವರು ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.ಮಲೆನಾಡು ವೀರಶೈವ ಸಮಾಜದ ಕಾರ್ಯದರ್ಶಿ ಯಡೆಹಳ್ಳಿ ಮಂಜುನಾಥ್ ಮಾತನಾಡಿ, ಹಿಮಾ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ. ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವುದು ಎಲ್ಲರ ಜವಾಬ್ದಾರಿ. ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಲಭ್ಯವಿರುವ ಆಡಿಯೋ, ಫೋಟೋ ಹಾಗೂ ಇತರ ಸಾಕ್ಷ್ಯಗಳನ್ನು ಪರಿಗಣಿಸಬೇಕು. ಮಲೆನಾಡು ವೀರಶೈವ ಸಮಾಜದ ಎಲ್ಲ ಅಂಗಸಂಸ್ಥೆಗಳು ಕುಟುಂಬಕ್ಕೆ ಅಗತ್ಯವಿರುವ ಕಾನೂನು ಮತ್ತು ಆರ್ಥಿಕ ನೆರವು ನೀಡಲು ಸಿದ್ಧವಿದ್ದು, ನ್ಯಾಯ ಸಿಗುವವರೆಗೂ ಕುಟುಂಬದೊಂದಿಗೆ ನಿಲ್ಲಲಿವೆ ಎಂದು ಭರವಸೆ ನೀಡಿದರು.ಹಿಮಾ ಅವರ ಸಂಬಂಧಿಯೊಬ್ಬರು ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಫೋಟೋಗಳನ್ನು ಪ್ರಕಟಿಸುವುದಾಗಿ ಬೆದರಿಕೆ ಹಾಕಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದರು. ಈ ಕುರಿತು ಹಿಮಾ ಆಸ್ಪತ್ರೆಯಲ್ಲಿದ್ದಾಗಲೇ ಪೊಲೀಸ್ ಅಧಿಕಾರಿಗಳು ಆಕೆಯ ಹೇಳಿಕೆಯನ್ನು ವಿಡಿಯೋ ರೂಪದಲ್ಲಿ ದಾಖಲಿಸಿಕೊಂಡಿದ್ದಾರೆ. ಆಡಿಯೋ ದಾಖಲೆಗಳು ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ಕುಟುಂಬದವರು ಪೊಲೀಸರಿಗೆ ಒದಗಿಸಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರುವ ಹಿಮಾ ಅವರ ಹೇಳಿಕೆ ಹಾಗೂ ಇತರ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಹಿಮಾ ಸಾವಿಗೆ ನ್ಯಾಯ ಒದಗಿಸುವುದು, ಮಹಿಳೆಯರಿಗೆ ಸುರಕ್ಷತೆ ಕಲ್ಪಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಯಿತು. ಕಳೆದುಕೊಂಡ ಮಗಳನ್ನು ಮರಳಿ ಪಡೆಯಲು ಸಾಧ್ಯವಾಗದ ನೋವಿನಲ್ಲಿರುವ ಕುಟುಂಬಕ್ಕೆ ನ್ಯಾಯ ದೊರಕಿಸುವುದೇ ನಿಜವಾದ ಸಾಂತ್ವನವಾಗಬೇಕು ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

=========

* ಹೇಳಿಕೆ

ಉದಯವಾರ ಭಾಗದ ಹಿಮಾ ಪ್ರಕರಣ ಅತ್ಯಂತ ನೋವಿನ ಸಂಗತಿಯಾಗಿದೆ. ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಕಟ್ಟಿಕೊಂಡು ತಂದೆತಾಯಂದಿರು ಅವರನ್ನು ಕಷ್ಟಪಟ್ಟು ಬೆಳೆಸುತ್ತಾರೆ. ಅಂತಹ ಕುಟುಂಬದ ಹೆಣ್ಣುಮಗಳ ಬದುಕಿನೊಂದಿಗೆ ಚೆಲ್ಲಾಟವಾಡಿ ಆಕೆಯ ಸಾವಿಗೆ ಕಾರಣವಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಸಿಮೆಂಟ್ ಮಂಜು, ಶಾಸಕ

============

ಫೋಟೋ

ಏರೋನಾಟಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ