ಕ್ಯಾತನಹಳ್ಳಿ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Sep 17, 2026, 01:30 AM IST
16ಎಚ್ಎಸ್ಎನ್15 :  | Kannada Prabha

ಸಾರಾಂಶ

ತಣ್ಣೀರುಹಳ್ಳದ ಬಳಿಯ ಶ್ರೀ ಶಿವಲಿಂಗೇಶ್ವರ ಮಠದಿಂದ ಆರಂಭವಾದ ರೈತರ ಕಾಲ್ನಡಿಗೆ ಪ್ರತಿಭಟನಾ ಮೆರವಣಿಗೆ ಬಿ.ಎಂ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿತು. ವಿವಿಧ ಹೋಬಳಿ ಹಾಗೂ ಗ್ರಾಮಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಏತ ನೀರಾವರಿ ಯೋಜನೆಯಿಂದ ಕೂಡಲೇ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ರೈತರು, ನೀರು ಹರಿಸುವ ಕುರಿತು ಸ್ಪಷ್ಟ ಭರವಸೆ ನೀಡುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ಕ್ಯಾತನಹಳ್ಳಿ ಏತ ನೀರಾವರಿ ಯೋಜನೆಯಿಂದ ಸಾಲಗಾಮೆ ಹೋಬಳಿಯ ರೈತರ ಜಮೀನುಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ಜಿಲ್ಲೆಯ ವಿವಿಧ ಹೋಬಳಿ ಹಾಗೂ ಗ್ರಾಮಗಳಿಂದ ಆಗಮಿಸಿದ್ದ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಕಾಲ್ನಡಿಗೆ ಹೋರಾಟಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಜೆ.ಗೌಡ ಮತ್ತು ಪುಷ್ಪಗಿರಿ ಮಠದ ಮಠಾಧೀಶರಾದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಸಾಥ್ ನೀಡಿದರು.ನಗರದ ತಣ್ಣೀರುಹಳ್ಳದ ಬಳಿಯ ಶ್ರೀ ಶಿವಲಿಂಗೇಶ್ವರ ಮಠದಿಂದ ಆರಂಭವಾದ ರೈತರ ಕಾಲ್ನಡಿಗೆ ಪ್ರತಿಭಟನಾ ಮೆರವಣಿಗೆ ಬಿ.ಎಂ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿತು. ವಿವಿಧ ಹೋಬಳಿ ಹಾಗೂ ಗ್ರಾಮಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಏತ ನೀರಾವರಿ ಯೋಜನೆಯಿಂದ ಕೂಡಲೇ ನೀರು ಹರಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ರೈತರು, ನೀರು ಹರಿಸುವ ಕುರಿತು ಸ್ಪಷ್ಟ ಭರವಸೆ ನೀಡುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪ್ರೀತಂ ಜೆ.ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಸತತ ಬರಗಾಲದಿಂದ ಸಾಲಗಾಮೆ ಹೋಬಳಿಯಲ್ಲಿ ರೈತರ ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ತುರ್ತಾಗಿ ಮೋಟಾರ್‌ ದುರಸ್ತಿ ಮಾಡಿ ನೀರು ಪೂರೈಸುವುದರ ಜತೆಗೆ ಶಾಶ್ವತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು. ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಅಡಿಕೆ, ತೆಂಗು ಸೇರಿದಂತೆ ಹಲವು ವರ್ಷಗಳಿಂದ ಬೆಳೆಸಿಕೊಂಡು ಬಂದಿರುವ ತೋಟಗಳನ್ನು ಉಳಿಸಿಕೊಳ್ಳುವುದು ರೈತರಿಗೆ ಸವಾಲಾಗಿದೆ. ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದೂ ಕಷ್ಟಕರ ಪರಿಸ್ಥಿತಿಗೆ ತಲುಪಿದೆ. ಮಳೆ ಕೈಕೊಟ್ಟಿರುವ ಸಂದರ್ಭದಲ್ಲಿ ನೀರಿನ ಮೂಲಗಳು ಮತ್ತು ಮೋಟಾರ್‌ಗಳ ವ್ಯವಸ್ಥೆಯನ್ನು ಮುಂಚಿತವಾಗಿಯೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲ ಎಂಬುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಪಕ್ಷಭೇದ ಮರೆತು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ನೀರಾವರಿ ಇಲಾಖೆಯ ಎಂಜಿನಿಯರ್‌ಗಳು ರೈತರ ಸಮಸ್ಯೆ ಪರಿಹಾರಕ್ಕೆ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದರು. ರೈತರ ಹೋರಾಟಕ್ಕೆ ಪಕ್ಷಭೇದ ಮರೆತು ಎಲ್ಲರೂ ಬೆಂಬಲ ನೀಡಬೇಕಾಗಿದೆ. ರೈತರ ಸಮಸ್ಯೆ ಯಾವುದೇ ಪಕ್ಷಕ್ಕೆ ಸೀಮಿತವಾಗಿರದೆ, ಕೃಷಿ ಮತ್ತು ಮುಂದಿನ ಪೀಳಿಗೆಯ ಬದುಕಿಗೆ ಸಂಬಂಧಿಸಿದ ವಿಚಾರವಾಗಿದೆ. ಅಧಿಕಾರದಲ್ಲಿರುವ ಹಾಗೂ ಹಿಂದೆ ಆಡಳಿತ ನಡೆಸಿದ ಜನಪ್ರತಿನಿಧಿಗಳು ಸಮಸ್ಯೆಯ ಬಗ್ಗೆ ಕಾಳಜಿ ವಹಿಸಿ, ಹಿಂದಿನ ತಪ್ಪುಗಳು ಮರುಕಳಿಸದಂತೆ ಮುಂದಿನ ಪೀಳಿಗೆಗೆ ಸುಸ್ಥಿರ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಸಾಲಗಾಮೆ ಹೋಬಳಿಯ ರೈತರಿಗೆ ಶೀಘ್ರ ನೀರು ಪೂರೈಸುವ ಕ್ರಮ ಕೈಗೊಳ್ಳಬೇಕು. ಸೆ.೨೮ರೊಳಗೆ ನೀರು ಪೂರೈಕೆ ಮಾಡುವಂತಾದರೆ ಅದು ರೈತ ಸಂಘಟನೆಗಳ ಹೋರಾಟಕ್ಕೆ ದೊರೆತ ಪ್ರಮುಖ ಯಶಸ್ಸಾಗಲಿದೆ ಎಂದು ಹೇಳಿದರು.ಯೋಜನೆ ಪೂರ್ಣಗೊಂಡರೂ ನೀರಿಲ್ಲ:

ರೈತ ಸಂಘದ ರಾಜ್ಯ ನಾಯಕ ಕಣಗಾಲ್ ಮೂರ್ತಿ ಮಾತನಾಡಿ, ಮಳೆ ಕೊರತೆ ಮತ್ತು ನೀರಿನ ಅಭಾವದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿರುವ ರೈತರ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಏತ ನೀರಾವರಿ ಯೋಜನೆಯಿಂದ ನೀರು ಹರಿಸುವ ಮೂಲಕ ರೈತರ ಬೆಳೆಗಳನ್ನು ಉಳಿಸಬೇಕು ಎಂದು ಒತ್ತಾಯಿಸಿದರು. ಏತ ನೀರಾವರಿ ಯೋಜನೆಯ ಉದ್ದೇಶವೇ ರೈತರ ಜಮೀನುಗಳಿಗೆ ನೀರು ಒದಗಿಸುವುದಾಗಿದ್ದು, ಯೋಜನೆ ಪೂರ್ಣಗೊಂಡಿದ್ದರೂ ನೀರು ಹರಿಸದಿರುವುದು ರೈತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯೋಜನೆಯಲ್ಲಿ ತಾಂತ್ರಿಕ ದೋಷ, ಪೈಪ್‌ಲೈನ್ ಸಮಸ್ಯೆ ಅಥವಾ ನಿರ್ವಹಣಾ ಕೊರತೆ ಇದ್ದರೆ ಅವುಗಳನ್ನು ತಕ್ಷಣ ಸರಿಪಡಿಸಿ, ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ರೈತರ ಬೆಳೆಗಳಿಗೆ ನೀರು ಒದಗಿಸುವಲ್ಲಿ ಯಾವುದೇ ಆಡಳಿತಾತ್ಮಕ ವಿಳಂಬವಾಗಬಾರದು ಎಂದು ಅವರು ಜಿಲ್ಲಾ ಉಸ್ತುವಾರಿ ಸಚಿವರೂ ಈಗಾಗಲೇ ಏತ ನೀರಾವರಿ ಯೋಜನೆಯಿಂದ ನೀರು ಹರಿಸುವ ಭರವಸೆ ನೀಡಿದ್ದಾರೆ. ಸಚಿವರ ಭರವಸೆಯನ್ನು ತಕ್ಷಣ ಕಾರ್ಯರೂಪಕ್ಕೆ ತಂದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ರೈತರು ಆಗ್ರಹಿಸಿದರು. ಏತ ನೀರಾವರಿ ಯೋಜನೆಯ ನೀರು ದೊರೆತರೆ ಜಿಲ್ಲೆಯ ಹಲವು ಗ್ರಾಮಗಳ ಸಾವಿರಾರು ಎಕರೆ ಜಮೀನುಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದ್ದು, ರೈತರ ಆರ್ಥಿಕ ಸಂಕಷ್ಟವೂ ಕಡಿಮೆಯಾಗಲಿದೆ. ಆದ್ದರಿಂದ ಭರವಸೆಯಂತೆ ನಿಗದಿತ ಅವಧಿಯೊಳಗೆ ನೀರು ಹರಿಸುವ ಕಾರ್ಯ ಪೂರ್ಣಗೊಳಿಸಬೇಕು ಎಂದು ರೈತರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ರೈತರ ಬೇಡಿಕೆಗಳನ್ನು ಆಲಿಸಿದರು. ಈ ತಿಂಗಳ ೨೮ರೊಳಗೆ ಏತ ನೀರಾವರಿ ಯೋಜನೆಯಿಂದ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆಯನ್ನು ಹಿಂಪಡೆದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಬಿಟ್ಟಗೌಡನಹಳ್ಳಿ ಮಂಜು, ಮಾರನಹಳ್ಳಿ, ಶೇಷಣ್ಣ, ನಾಗರಾಜು, ಪಾಲಾಕ್ಷ, ಬಿಜೆಪಿ ಮುಖಂಡರಾದ ಪುರುಷೋತ್ತಮ್, ಲಲಾಟ್ ಮೂರ್ತಿ ಇತರರು ಉಪಸ್ಥಿತರಿದ್ದರು.==ಫೋಟೋ========

ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಕಾಲ್ನಡಿಗೆ ಹೋರಾಟಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ.ಗೌಡ ಮತ್ತು ಪುಷ್ಪಗಿರಿ ಮಠದ ಶ್ರೀಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಇಒ ಕಚೇರಿ ವಿರುದ್ಧದ ಆರೋಪಗಳ ತನಿಖೆಗೆ ಲೋಕಾಯುಕ್ತಕ್ಕೆ ಲಿಖಿತ ದೂರು
ಆಸ್ಪತ್ರೆ, ಕಾಲೇಜು ಜಾಗದ ಖರಾಬು ಭೂಮಿ ಮಾಯ..!