ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭಾರತೀಯ ಕಿಸಾನ್ ಸಂಘದಿಂದ ಆಗ್ರಹ
ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ನೀರು ಹರಿಸುವುದು, ಕೆ.ಸಿ. ಮತ್ತು ಎಚ್.ಎನ್. ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸುವುದು ಹಾಗೂ ಆಂಧ್ರಪ್ರದೇಶದ ಗಡಿ ಭಾಗಕ್ಕೆ ಬಂದಿರುವ ಕೃಷ್ಣಾ ನದಿ ನೀರನ್ನು ಅವಳಿ ಜಿಲ್ಲೆಗಳಿಗೆ ಒದಗಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ವತಿಯಿಂದ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಎಪಿಎಂಸಿ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳ ಹಾವಳಿ ನಿಯಂತ್ರಿಸಿ ರೈತರ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರಕಿಸಬೇಕು. ರೈತರಿಂದ ಪಡೆಯಲಾಗುತ್ತಿದೆ ಎನ್ನಲಾದ ಶೇ.10ರಷ್ಟು ಕಮಿಷನ್ ಪದ್ಧತಿಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ರೈತರ ಸಾಲ ಮನ್ನಾ ಮಾಡಬೇಕು, ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಹಾಗೂ ಬಗರ್ ಹುಕುಂ ಸಾಗುವಳಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ನೈಜ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿ, ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ವೆಂಕಟರೆಡ್ಡಿ, ಎಪಿಎಂಸಿ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳು ರೈತರಿಂದ ಶೇ.10ರಷ್ಟು ಕಮಿಷನ್ ಪಡೆಯುವ ಮೂಲಕ ಅನ್ಯಾಯ ಎಸಗುತ್ತಿದ್ದಾರೆ. ಜಿಲ್ಲೆಯಲ್ಲಿ ಇದನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘದ ಜಿಲ್ಲಾ ಯುವ ಮುಖಂಡ ಮುರಳಿ ಮಾತನಾಡಿ, ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಆರಂಭಿಸಲಾದ ಎತ್ತಿನಹೊಳೆ ಯೋಜನೆ 12 ವರ್ಷಗಳಾದರೂ ಪೂರ್ಣಗೊಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ನೀರು ಒದಗಿಸುವ ಭರವಸೆ ನೀಡುತ್ತಾರೆ. ಆದರೆ ಚುನಾವಣೆ ಮುಗಿದ ಬಳಿಕ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ್, ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ, ದಕ್ಷಿಣ ಪ್ರಾಂತ್ಯದ ಕಾರ್ಯಕಾರಿಣಿ ಸದಸ್ಯ ರಾಮಾಂಜಿ, ಮುಖಂಡರಾದ ಗೋವಿಂದರೆಡ್ಡಿ, ಸಿದ್ದರಾಮಯ್ಯ, ಶಿವಮೂರ್ತಿ, ಚಿಕ್ಕರೆಡ್ಡಿ, ಆಂಜನೇಯ ರೆಡ್ಡಿ, ಜೀಯಪ್ಪ, ಬಯಪ್ಪ, ಅಶ್ವತ್ಥಪ್ಪ, ಮುನಿಶಾಮಿರೆಡ್ಡಿ, ಮುನಿಕೃಷ್ಣಪ್ಪ, ಶ್ರೀನಿವಾಸ್, ಕೃಷ್ಣಪ್ಪ ಮತ್ತಿತರರು ಇದ್ದರು.