ಧಾರವಾಡ:
ಪಶು ವೈದ್ಯಾಧಿಕಾರಿ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆಸಿದ್ದು ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ಇದರ ಸಂಪೂರ್ಣ ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಆರು ದಿನಗಳಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿ ನಮ್ಮ ಹೋರಾಟಕ್ಕೆ ಸ್ಪಂದಿಸಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿಯತ್ತ ತೆರಳಿ ಮುತ್ತಿಗೆ ಹಾಕಲು ಯತ್ನಿಸಿತು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಮುಂದಾದಾಗ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಹಲವರನ್ನು ಬಂಧಿಸಿ ಕರೆದೊಯ್ದರು. ಜತೆಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅನಿಲ್ ಕಾಂಬಳೆ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.