ಕನ್ನಡಪ್ರಭ ವಾರ್ತೆ ಭಾರತೀನಗರ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.18ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಹಾಸ್ಟೆಲ್ ಹಾಗೂ ವಸತಿ ಶಾಲಾ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ ತಿಳಿಸಿದರು.ಕೃಷಿಕೂಲಿಕಾರರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹಾಸ್ಟೆಲ್ ಹೊರಗುತ್ತಿಗೆ ನೌಕರರು ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು ಅವರಿಗೆ ಬೇಕಾಗಿರುವ ಪ್ರಮುಖ ಬೇಡಿಕೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಸಮಿತಿಯ ಪರವಾಗಿ ಸುವರ್ಣಸೌಧಕ್ಕೆ ಡಿ.೧೮ ರಂದು ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಹೊರಗುತ್ತಿಗೆ ನೌಕರರ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು. ಕನಿಷ್ಠ ಮಾಸಿಕ ವೇತನ 30 ಸಾವಿರ ನೀಡಬೇಕು, ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧ್ದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಸ್ತರಿಸಬೇಕು ಎಂದು ಆಗ್ರಹಿಸಲಾಗುವುದು.
ಕಾರ್ಮಿಕ ಕಾನೂನು ಪ್ರಕಾರ ವಾರದ ರಜೆ ಕೊಡಬೇಕು. ಕೆಲಸದ ಸಮಯ ನಿಗಧಿಯಾಗಬೇಕು. ಪ್ರತೀ ತಿಂಗಳು 5 ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು ಎಂದು ಒತ್ತಾಯಿಸಲಾಗುವುದು.ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿ ಸೇವಾ ಭದ್ರತೆ ಕೊಡಬೇಕು. ಖಾಯಂ ನೌಕರರ ಸ್ಥಳಗಳಿಗೆ ಖಾಯಂ ನೌಕರರನ್ನು ವರ್ಗಾವಣೆ ಮಾಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಕೊಡಬೇಕು ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರಕ್ಕೆ ಮುಂದಿಟ್ಟು, ಇದನ್ನು ಜಾರಿಗೆ ಮಾಡದ ಕಾರಣ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ವೇಳೆ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಜಿಲ್ಲಾಧ್ಯಕ್ಷ ಸಂತೋಷ್, ಜಿಲ್ಲಾ ಉಪಾಧ್ಯಕ್ಷ ನರಸಿಂಹ, ಸರೋಜಮ್ಮ, ಶೋಭಾ, ಸುನಂದಮ್ಮ, ಆಶಾರಾಣಿ ಸೇರಿದಂತೆ ಹಲವರಿದ್ದರು.