ಕನ್ನಡಪ್ರಭ ವಾರ್ತೆ ಮಡಿಕೇರಿ
ಕಾಂಗ್ರೆಸ್ ಶಾಸಕರ ಕುಮ್ಮಕ್ಕಿನಿಂದ ಬಿಜೆಪಿ ಕಾರ್ಯಕರ್ತರ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಿದರೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸುವ ಹಕ್ಕು ವಿರೋಧ ಪಕ್ಷಗಳಿಗಿದೆ. ಆದರೆ ಜಿಲ್ಲೆಯ ಕಾಂಗ್ರೆಸಿಗರು ಪ್ರತಿಭಟನೆ ನಡೆಸುವವರ ವಿರುದ್ಧ ಸುಳ್ಳು ದೂರು ದಾಖಲಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ವಿರಾಜಪೇಟೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿ ಮಾಡಲಾಗಿದೆ ಎಂದು ಸುಳ್ಳು ದೂರು ನೀಡಿ ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.ದುರಾಡಳಿತ, ಭ್ರಷ್ಟಾಚಾರ, ಆಡಳಿತ ವೈಫಲ್ಯ, ಅಭಿವೃದ್ಧಿ ಶೂನ್ಯ ವ್ಯವಸ್ಥೆ ಮುಚ್ಚಿ ಹಾಕಿ ಜನರ ಹಾದಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ವಿರೋಧ ಪಕ್ಷದ ಹೋರಾಟ ಹತ್ತಿಕ್ಕಲು ಮತ್ತು ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ದೂರು ದಾಖಲಿಸಲಾಗುತ್ತಿದೆ. ಇದು ಹೀಗೆ ಮುಂದುವರಿದರೆ ಜಿಲ್ಲಾವ್ಯಾಪಿ ಯುವ ಮೋರ್ಚಾದಿಂದ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ವಿಧಾನಸಭಾಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಹಾಗೂ ಕ್ರೀಡಾ ಸಚಿವರಾಗಿದ್ದ ಅಪ್ಪಚ್ಚು ರಂಜನ್ ಪ್ರತಿಕೃತಿಯನ್ನು ಈ ಹಿಂದೆ ಕಾಂಗ್ರೆಸಿಗರು ದಹಿಸಿದ್ದಾರೆ. ವಿರೋಧ ಪಕ್ಷದ ಪ್ರತಿಭಟಿಸುವ ಸ್ವತಂತ್ರವನ್ನು ಗೌರವಿಸಿದ್ದ ಅಂದಿನ ಬಿಜೆಪಿ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಯಾವುದೇ ರೀತಿಯ ಮೊಕದ್ದಮೆ ದಾಖಲಿಸಿರಲಿಲ್ಲ ಎಂದರು.ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಚಿಮಂಡ ಪ್ರಸಾದ್ ಚಂಗಪ್ಪ ಮಾತನಾಡಿ, ಬಿಜೆಪಿ ಕಾರ್ಯಕರ್ತರು ದೂರು ನೀಡಿದರೆ ಪ್ರಕರಣ ದಾಖಲಿಸುತ್ತಿಲ್ಲ. ಆದರೆ ಬಿಜೆಪಿಯವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಕೊಡಗಿನಲ್ಲಿ ಎಲ್ಲಾ ಸಮುದಾಯದವರು ಶಾಂತಿಯುತವಾಗಿ ಒಗ್ಗಟ್ಟಿನಿಂದ ಜೀವನ ಸಾಗಿಸುತ್ತಿದ್ದಾರೆ. ಕೇವಲ ಪ್ರತಿಕೃತಿ ದಹನದ ವಿಚಾರ ಮುಂದಿಟ್ಟುಕೊಂಡು ರಾಜಕೀಯವಾಗಿ ಒಂದು ಸಮುದಾಯವನ್ನು ಎಳೆದು ತರುವುದು ಖಂಡನೀಯ ಎಂದರು.ಸುದ್ದಿಗೋಷ್ಠಿಯಲ್ಲಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೊನ್ನಚೆಟ್ಟೀರ ವಿನೋದ್, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ಚೇತನ್ ಬಂಗೇರ ಹಾಗೂ ಮಡಿಕೇರಿ ನಗರಾಧ್ಯಕ್ಷ ಪಾಂಡೀರ ಪೂಣಚ್ಚ ಉಪಸ್ಥಿತರಿದ್ದರು.