ಹೊಸಪೇಟೆಯಲ್ಲಿ ಜುಲೈ 31ಕ್ಕೆ ಲಿಂಗತ್ವ ಅಲ್ಪಸಂಖ್ಯಾತರ ಪ್ರತಿಭಟನೆ

KannadaprabhaNewsNetwork |  
Published : Jul 29, 2024, 01:02 AM IST
28ಎಚ್‌ಪಿಟಿ5-ಹೊಸಪೇಟೆಯ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟವನ್ನು ಬೆಂಬಲಿಸಿ ಶ್ರೀ ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಮಾತನಾಡಿದರು. ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ರಾಜ್ಯ ಸಮಿತಿ ಸಹ ಅಧ್ಯಕ್ಷೆ ವೈಶಾಲಿ ಇದ್ದರು. | Kannada Prabha

ಸಾರಾಂಶ

ಸಮಾಜದಿಂದ ನಿರ್ಲಕ್ಷ್ಯ, ಅವಮಾನಕ್ಕೀಡಾಗುತ್ತಿರುವ ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸರ್ಕಾರ ವಿಫಲವಾಗಿದೆ

ಹೊಸಪೇಟೆ: ಸಮಾಜದಿಂದ ನಿರ್ಲಕ್ಷ್ಯ, ಅವಮಾನಕ್ಕೀಡಾಗುತ್ತಿರುವ ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ, ಚಿಗುರು ಸಮುದಾಯ ಸೇವಾ ಸಂಸ್ಥೆಯಿಂದ ಜು.31ರಂದು ನಗರದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಲಿದೆ ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ರಾಜ್ಯ ಸಮಿತಿ ಸಹ ಅಧ್ಯಕ್ಷೆ ವೈಶಾಲಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಯು ಲಿಂಗತ್ವ ಅಲ್ಪಸಂಖ್ಯಾತರನ್ನು ಒಳಗೊಂಡಿದ್ದು, ಅದು ಕೇವಲ ಮಹಿಳೆಯರ ಉಡುಪಿನಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾತ್ರ ಉಪಯೋಗವಾಗುತ್ತಿದೆ. ಗಂಡಸರ ಉಡುಪಿನಲ್ಲಿರುವ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತ್ತು ಪುರುಷ ಲಿಂಗತ್ವ ಅಲ್ಪಸಂಖ್ಯಾತರಿಗೆ ಉಪಯೋಗವಾಗುತ್ತಿಲ್ಲ. ಅವರು, ಬಸ್‌ನಲ್ಲಿ ಪ್ರಯಾಣಿಸುವಾಗ ಅವಮಾನಿಸಲಾಗುತ್ತಿದೆ. ಈ ಕಾರಣದಿಂದ ಶಕ್ತಿ ಮತ್ತು ಮೈತ್ರಿ ಯೋಜನೆಗಳಿಂದ ಅವರು, ದೂರ ಉಳಿದಿದ್ದಾರೆ ಎಂದರು.

ಸಂಘಟನೆಯ ವಿಜಯನಗರದ ಜಿಲ್ಲಾ ಸಹ ಅಧ್ಯಕ್ಷೆ ಮಂಜಮ್ಮ ಮಾತನಾಡಿ, ನಗರದ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಸೂರು ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ಆದರೆ ಈವರಗೆ ಒಮ್ಮೆಯೂ ವಸತಿ ಸಚಿವರು ಇತ್ತ ತಿರುಗಿಯೂ ನೋಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಚಿಗುರು ಸಮುದಾಯ ಸೇವಾ ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮಿ ಮಾತನಾಡಿ, ಭಿಕ್ಷಾಟನೆಯಲ್ಲಿ ತೊಡಗಿರುವ ಬಹುತೇಕ ಲಿಂಗತ್ವ ಅಲ್ಪಸಂಖ್ಯಾತರು ಇತ್ತೀಚಿಗೆ ಪೊಲೀಸರು ಬಂಧಿಸುತ್ತಿದ್ದಾರೆ. ದೇವಸ್ಥಾನ, ಸಂಘ-ಸಂಸ್ಥೆಗಳು, ಸಾರ್ವಜನಿಕರು, ಹಣಕಾಸು ಸಂಸ್ಥೆಗಳಿಂದ ದೇಣಿಗೆ ಪಡೆಯುತ್ತಿರುವುದು ಭಿಕ್ಷಾಟನೆ ಆಗುವುದಿಲ್ಲವೇ? ಅದು ನಾವು ಭಿಕ್ಷೆ ಬೇಡಿದರೆ ಅಪರಾಧವೇ ಎಂದು ಪ್ರಶ್ನಿಸಿದರು.

ಸರ್ಕಾರ ಭಿಕ್ಷಾಟನೆಯನ್ನು ನಿರಪರಾಧೀಕರಣ ಗೊಳಿಸಬೇಕು ಎಂದು ಒತ್ತಾಯಿಸಿದರು.

ನಗರದ ಶ್ರೀ ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜ ಗೌರವದಿಂದ ಕಾಣಬೇಕಿದೆ. ಪಡಿತರ ಚೀಟಿ, ಆಧಾರ್ ಕಾರ್ಡ್ ಸೇರಿದಂತೆ ಹಲವು ಯೋಜನೆಗಳಿಂದ ವಂಚಿತರಾಗಿದ್ದಾರೆ. ಅದರಲ್ಲಿಯೂ ಅವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಬೇಕಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ನಾನೊಂದು ಗುಡಿ ಕೈಗಾರಿಕೆ ಹಾಕಿ ಇವರಿಗೆ ಆಶ್ರಯ ಒದಗಿಸುವೆ ಎಂದರು.

ಪದ್ಮಶ್ರೀ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ, ಮಂಜಮ್ಮ ವಡ್ಡರು ಮತ್ತಿತರರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ