ಮಾಲ್ದಾರೆ ಸಮೀಪದ ಗದ್ದುಗೆ ಬೆಟ್ಟದಲ್ಲಿರುವ ಐತಿಹಾಸಿಕ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಸಮೀಪ ಅಕ್ರಮವಾಗಿ ಖಬರ್ ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ರಸ್ತೆ ತಡೆ ನಡೆಸಿ ತೀವ್ರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಸಿದ್ದಾಪುರ
ಮಾಲ್ದಾರೆ ಸಮೀಪದ ಗದ್ದುಗೆ ಬೆಟ್ಟದಲ್ಲಿರುವ ಐತಿಹಾಸಿಕ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಸಮೀಪ ಅಕ್ರಮವಾಗಿ ಖಬರ್ ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ರಸ್ತೆ ತಡೆ ನಡೆಸಿ ತೀವ್ರ ಪ್ರತಿಭಟನೆ ನಡೆಸಿದರು.
ಘಟನೆ ಖಂಡಿಸಿ ಜಿಲ್ಲೆ ವಿವಿಧ ಭಾಗಗಳಿಂದ ಆಗಮಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೇವಾಲಯದ ಬೆಟ್ಟಕ್ಕೆ ತೆರಳಿ, ದೇವಾಲಯದ ಸಮೀಪ ನಿರ್ಮಿಸಲಾಗಿದ್ದ ಅಕ್ರಮ ಖಬರ್ ತೆರವುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಸ್ತೆ ತಡೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್ ಪ್ರಮುಖ ಚಕ್ಕೆರ ಮನು, ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ತರುವ ಉದ್ದೇಶದಿಂದ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದರು. ಅರಣ್ಯ ಇಲಾಖೆ ಅನುಮತಿ ಇಲ್ಲದೆ ಯಾರಿಗೂ ಈ ಪ್ರದೇಶಕ್ಕೆ ಪ್ರವೇಶ ಸಾಧ್ಯವಿಲ್ಲದಿದ್ದರೂ ಕಿಡಿಗೇಡಿಗಳು ಹೇಗೆ ಬಂದರು ಎಂಬ ಪ್ರಶ್ನೆಯನ್ನು ಅವರು ಎತ್ತಿದರು.
ಇದು ಚೋಳರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಾಲಯವಾಗಿದೆ. ಕೊಡಗಿನಲ್ಲಿ ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಇಂತಹ ಕೃತ್ಯ ಎಸಗಲಾಗಿದೆ. 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ಕೊಡಗು ಹಾಗೂ ಪಿರಿಯಾಪಟ್ಟಣ ಬಂದ್ ಸೇರಿದಂತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಿಂದೂ ಮುಖಂಡ ರವಿ ಕುಶಾಲಪ್ಪ ಮಾತನಾಡಿ, ಜಿಲ್ಲೆಯ ಪಾಲೂರು ದೇವಾಲಯ ಸೇರಿದಂತೆ ಹಲವು ದೇವಾಲಯಗಳ ವಿರುದ್ಧ ಸಂಚು ನಡೆಯುತ್ತಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ನವೀನ್ ಕುಮಾರ್, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಪ್ರತಿಭಟನಾಕಾರರು, ಸ್ಥಳಕ್ಕೆ ಬಂದಿದ್ದ ವಾಹನಗಳ ನೋಂದಣಿ ಸಂಖ್ಯೆ ಸೇರಿದಂತೆ ಲಭ್ಯವಿರುವ ಎಲ್ಲ ಮಾಹಿತಿಯನ್ನು ಆಧರಿಸಿ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು ಎಂದು ಒತ್ತಾಯಿಸಿದರು.
ಎಫ್‌ಐಆರ್ ದಾಖಲಾಗುವವರೆಗೆ ಸ್ಥಳ ಬಿಟ್ಟು ತೆರಳುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಿದರು. ಬಳಿಕ ಸ್ಥಳದಲ್ಲೇ ದೂರು ದಾಖಲಿಸಿ ಪ್ರಕರಣ ದಾಖಲಿಸಲು ಒಪ್ಪಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. ಕ್ರಮ ಕೈಗೊಳ್ಳುವವರೆಗೆ ಹೋರಾಟ ಮುಂದುವರಿಸುವುದಾಗಿ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.
ಈ ವೇಳೆ ಡಿವೈಎಸ್‌ಪಿ ಸೂರಜ್ ಮಾತನಾಡಿ, ಪ್ರಕರಣ ಸಂಬಂಧ ತಕ್ಷಣವೇ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗುವುದು ಎಂದು ತಿಳಿಸಿದರು.
ಹಿಂದೂ ಸಂಘಟನೆಗಳ ಪ್ರಮುಖರಾದ ರಾಬಿನ್ ದೇವಯ್ಯ, ನೆಲ್ಲಿರ ಚಲನ್, ಕಿಲನ್ ಗಣಪತಿ, ಸುನಿಲ್ ಮಾದಾಪುರ, ಬೋಜೆ ಗೌಡ, ವಿಜು ಅಮ್ಮತ್ತಿ, ವಿನಾಯಕ, ಸಜೀವ್ ವಿರಾಜಪೇಟೆ, ಅಮ್ಮತ್ತಿಯ ಜಿತಿನ್ ರವೀಂದ್ರ, ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಹಿಂದೂ ಸಂಘಟನೆ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.