ಮೈಕ್ರೋ ಫೈನಾನ್ಸ್ ಹಾವಳಿ ತಡೆಯುವಂತೆ ಪ್ರತಿಭಟನೆ

KannadaprabhaNewsNetwork |  
Published : Feb 06, 2025, 11:46 PM IST
6ಕೆಎಂಎನ್ ಡಿ12 | Kannada Prabha

ಸಾರಾಂಶ

ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿರ್ಬಂಧಿಸಬೇಕು. ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರದ ಜೊತೆಗೆ ಸಾಲಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಜೊತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿ ಕಡಿವಾಣ ಹಾಕಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಹಿಳೆಯರು, ರೈತರು ಹಾಗೂ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ತಡೆಯುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ಕಾರ್ಯಕರ್ತರು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಮೈಕ್ರೋ ಫೈನಾನ್ಸ್‌ ಗಳ ಸಾಲದ ಸುಳಿಗೆ ಸಿಲುಕಿ ರಾಜ್ಯದಲ್ಲಿ ಮಹಿಳೆಯರು ಮತ್ತು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೆಚ್ಚಿನ ಬಡ್ಡಿ ಸುಲಿಗೆ, ಅಶ್ಲೀಲ ಪದ ಬಳಕೆ, ಹಣ ವಸೂಲಾತಿಗಾಗಿ ರೌಡಿಗಳ ಬಲ ಪ್ರಯೋಗದಂತಹ ಕ್ರೌರ್ಯಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆಯನ್ನು ಹೊರಡಿಸಿ ಕಿರುಕುಳ ನೀಡಿದವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿ, ಜಿಲ್ಲಾ ಕೇಂದ್ರಗಳಲ್ಲೂ ಸಹಾಯವಾಣಿಗಳನ್ನು ತೆರೆಯುವಂತೆ ಸೂಚಿಸಲಾಗಿದೆ. ಆದರೆ, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮಾತ್ರವಲ್ಲದೆ ರಾಜ್ಯದ ಪ್ರತಿಷ್ಠಿತ ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಕಂಪನಿಗಳು ಅನಿಯಂತ್ರಿತ ಠೇವಣಿಗಳ ಯೋಜನೆಯಡಿ ಅಧಿಕ ಬಡ್ಡಿ ಆಸೆ ತೋರಿಸಿ ಜನರಿಂದ ಹಣ ದೋಚಿ ವಂಚಿಸಿರುವ ಘಟನೆಗಳು ಕೂಡಾ ಬೆಳಕಿಗೆ ಬಂದಿವೆ. ಈ ಪ್ರಕರಣಗಳ ವಿರುದ್ಧವೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ಮೋಸ ಹೋದ ಜನರಿಗೆ ಯಾವುದೇ ಪರಿಹಾರ ದೊರೆತಿಲ್ಲ. ಇದರ ಜೊತೆಗೆ ಮೈಕ್ರೋ ಫೈನಾನ್ಸ್ ಹಾವಳಿಗಳ ಜೊತೆಗೆ ಮೀಟರ್ ಬಡ್ಡಿ ದಂಧೆಗಳು ಜನಸಾಮಾನ್ಯರ ರಕ್ತ ಹೀರುತ್ತಿವೆ. ಸಾಲದ ಸುಳಿಯಿಂದ ಪಾರು ಮಾಡಲು ಸುಗ್ರಿವಾಜ್ಞೆ ಹೊರಡಿಸಿದರೆ ಪ್ರಯೋಜನವಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮರ್ಪಕವಾಗಿ ಜವಾಬ್ದಾರಿ ನಿರ್ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿರ್ಬಂಧಿಸಬೇಕು. ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರದ ಜೊತೆಗೆ ಸಾಲಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಜೊತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿ ಕಡಿವಾಣ ಹಾಕಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಗೃಹ ಲಕ್ಷ್ಮೀ ಯೋಜನೆ ಸಮರ್ಪಕವಾಗಿ ಜಾರಿಯಾಗದೆ ಮಹಿಳೆಯರಿಗೆ ತೊಂದರೆಯಾಗಿದೆ. ಪ್ರತಿ ತಿಂಗಳು ಹಣ ಸಂದಾಯ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕೊಟ್ಟ ಮಾತಿನಂತೆ ಆಡಳಿತ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಜನಶಕ್ತಿಯ ಪೂರ್ಣಿಮಾ, ಸಿದ್ದರಾಜು, ಮಹಿಳಾ ಮುನ್ನಡೆ ಕಮಲ, ಶಿಲ್ಪ ಬಿ. ಎಸ್, ಲತಾ ಶಂಕರ್, ಪ್ರಿಯ ರಮೇಶ್, ಗಿರಿಜಾ, ಸುಮಾ ಸೇರಿ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ