ರವಿ ಹುಂಜ ಬಂಧನಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ

KannadaprabhaNewsNetwork |  
Published : Nov 19, 2026, 01:30 AM IST
ಚಿತ್ರ 18ಬಿಡಿಆರ್55 | Kannada Prabha

ಸಾರಾಂಶ

ಬಸವ ಮಂಟಪ ಪುಸ್ತಕದ ನಿಷೇಧಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ, ರವಿ ಹುಂಜ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯಿಸಲಾಗುವುದು ಎಂದು ಧನ್ನೂರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೀದರ್

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ ಸಾಹಿತ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ರವಿ ಹುಂಜ ಮಠ ಅವರನ್ನು ಕೂಡಲೇ ಬಂಧಿಸಬೇಕು. ಅವರ ‘ಬಸವ ಮಂಟಪ’ಕೃತಿಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ನ.19ರಂದು ನಗರದ ಬಸವೇಶ್ವರ ವೃತ್ತದಲ್ಲಿ ಹುಂಜ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ದಹಿಸಲಾಗುವುದು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಡ್ರೀಯ ಉಪಾಧ್ಯಕ್ಷ ಬಸವರಾಜ ಧನ್ನೂರ್ ಹೇಳಿದರು.

ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಕುರಿತು ರವಿ ಹುಂಜ ನೀಡಿರುವ ಹೇಳಿಕೆಗಳು ದೇಶ-ವಿದೇಶಗಳಲ್ಲಿರುವ ಬಸವ ಭಕ್ತರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಒಂದೆರಡು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಸವ ತತ್ತ್ವ, ಲಿಂಗಾಯತ ಧರ್ಮ, ಬಸವಾದಿ ಶರಣರು, ಮಠಾಧೀಶರು ಹಾಗೂ ಬಸವಪರ ಹೋರಾಟಗಾರರ ವಿರುದ್ಧ ರವಿ ಹುಂಜ ಲೇಖನಗಳನ್ನು ಪ್ರಕಟಿಸುತ್ತಿದ್ದಾರೆ. ತಮ್ಮ ಲೇಖನಗಳನ್ನು ಸಂಗ್ರಹಿಸಿ ಸುಮಾರು 600 ಪುಟಗಳ ‘ಬಸವ ಮಂಟಪ’ ಕೃತಿ ಯನ್ನು ಹೊರ ತಂದಿದ್ದಾರೆ. ನವೆಂಬರ್ 15ರಂದು ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭಕ್ಕೂ ಮುನ್ನ ನೀಡಿದ ಮಾಧ್ಯಮ ಸಂದರ್ಶನದಲ್ಲಿ ಬಸವಣ್ಣನವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು.

ಕೃತಿ ನಿಷೇಧಕ್ಕೆ ಒತ್ತಾಯ:

ರವಿ ಹುಂಜ ಬರೆದ ‘ಬಸವ ಮಂಟಪ’ ಕೃತಿಯಲ್ಲಿ ಬಸವ ತತ್ತ್ವದ ಪ್ರಚಾರಕರು, ಮಠಾಧೀಶರು ಹಾಗೂ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಟ ನಡೆಸಿದ ಅನೇಕ ಮುಖಂಡರ ವಿರುದ್ಧ ಅವಹೇಳನಕಾರಿ ಬರಹಗಳಿವೆ ಎಂದು ಆರೋಪಿಸಿದರು.

ಕೃತಿಯಲ್ಲಿರುವ ಆಕ್ಷೇಪಾರ್ಹ ಅಂಶಗಳನ್ನು ಪರಿಶೀಲಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಪುಸ್ತಕದ ನಿಷೇಧಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ, ರವಿ ಹುಂಜ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ರವಿ ಹುಂಜ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಲಾಗುವುದು. ಅವರ ಅವಹೇಳನಕಾರಿ ಹೇಳಿಕೆಗಳು ಪ್ರಸಾರವಾಗುತ್ತಿರುವ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧವೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿವಿಧ ಬಸವಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುವುದು. ರವಿ ಹುಂಜ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲು ನಿರ್ಧರಿಸಲಾಗಿದೆ ಎಂದು ಧನ್ನೂರ್ ತಿಳಿಸಿದರು.

ಸಂವಿಧಾನವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯಿ ನೀಡಿದೆ. ಆದರೆ, ಮತ್ತೊಂದು ಧರ್ಮವನ್ನು ಅವಹೇಳನ ಮಾಡುವ ಮೂಲಕ ಅದರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಈ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಕಾನೂನು ಕ್ರಮ ಜರುಗಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು. ಪೂಜ್ಯ ಚನ್ನಬಸವಾನಂದ ಸ್ವಾಮಿ, ಪೂಜ್ಯ ಬಸವಪ್ರಭು ಸ್ವಾಮಿಜಿ, ಮಾತೆ ಬೆಲ್ದಾಳ ಶ್ರೀಗಳು, ಬಸವರಾಜ ಬುಳ್ಳಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ