ಹುಬ್ಬಳ್ಳಿ: ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರದೇಶ ಕುರುಬ ಸಮಾಜ ಒಕ್ಕೂಟದ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಕುರಿಗಾಹಿ ಸಮಾಜದವರು ನೂರಾರು ಕುರಿಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್‌ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಸಂಗೊಳ್ಳಿ ರಾಯಣ್ಣ ಸರ್ಕಲ್, ಚನ್ನಮ್ಮ ವೃತ್ತದ ಮಾರ್ಗವಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿದರು. ಈ ವೇಳೆ ರಾಜ್ಯ ಸರಕಾರ ಹಾಗೂ ಸಿಎಂ ಸಿದ್ದರಾಮಯ್ಯನವರ ವಿರುದ್ಧ ವಿವಿಧ ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಕಳೆದ 4-5 ದಶಕಗಳಿಂದ ಕುರುಬ ಸಮಾಜಕ್ಕೆ ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆಯನ್ನು ಯಾವುದೇ ಸರ್ಕಾರಗಳು ಈಡೇರಿಸುತ್ತಿಲ್ಲ. 2017ರಲ್ಲಿ ಮಠಾಧೀಶರು ಹಾಗೂ ಸಮಾಜದ ಮುಖಂಡರ ಸಭೆ ಕರೆದ ಅಂದಿನ ಸಿಎಂ ಸಿದ್ದರಾಮಯ್ಯನವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇಂದಿಗೂ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸಿದ್ದರಾಮಯ್ಯನವರು ಈಡೇರಿಸದೇ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕುರುಬ ಸಮಾಜಕ್ಕೆ ಪರಿಶಿಷ್ಟಪಂಗಡ ಮೀಸಲಾತಿಯ ಕುರಿತು ಕುಲಶಾಸ್ತ್ರ ಅಧ್ಯಯನದ ವರದಿಯನ್ನು 2023ರಲ್ಲಿ ಮೈಸೂರು ವಿಶ್ವವಿದ್ಯಾಲಯ ಅಂದಿನ ಬಿಜೆಪಿ ಪಕ್ಷದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ. ಆದರೆ, ಅವರು ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಕ್ಯಾಬಿನೇಟ್‌ನಲ್ಲಿ ಚರ್ಚೆಗೆ ಅನುಕೂಲ ಮಾಡದೇ ಅನ್ಯಾಯ ಮಾಡಿದ್ದಾರೆ. ಅವರ ನಡೆಯನ್ನು ವಿರೋಧಿಸಿ ರಾಜ್ಯಾದ್ಯಂತ ಕುರುಬ ಸಮಾಜದವರು ಬಿಜೆಪಿ ವಿರುದ್ಧ ಹೋರಾಟ ನಡೆಸಿದರು. ಆಗ 2023ರ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಸಮಾಜಕ್ಕೆ ಮತ್ತೇ ಭರವಸೆ ನೀಡಿದರು. ಆದರೆ, ಇಂದಿಗೂ ಅದನ್ನು ಈಡೇರಿಸುವ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.ಈ ವೇಳೆ ಸಂಘಟನೆಯ ರಾಜ್ಯಾಧ್ಯಕ್ಷ ಸಿದ್ದು ತೇಜಿ ಮಾತನಾಡಿ, ಕುರಿಗಾರರು ಅರಣ್ಯದಲ್ಲಿ ಕುರಿ ಮೇಯಿಸುವ ಅನುಮತಿಯನ್ನು ಅರಣ್ಯ ಇಲಾಖೆ ಏಕಾಏಕಿ ರದ್ದುಪಡಿಸಿರುವುದು ಖಂಡನೀಯ. ಕುರಿಗಾರರ ವಿಶೇಷ ಕಾನೂನು ಜಾರಿಗೆ ತರುವಲ್ಲಿ, ರಾಜ್ಯದ ಕುರಿಗಾರರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ದಬ್ಬಾಳಿಕೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಕೂಡಲೇ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆ ಈಡೇರಿಸಬೇಕು. ಇಲ್ಲದೇ ಹೋದಲ್ಲಿ ಮುಂಬರುವ ಜಿಪಂ, ತಾಪಂ ಚುನಾವಣೆ ಬಹಿಷ್ಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
ನಂತರ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ರವಿರಾಜ ಕಂಬಳಿ ಸೇರಿದಂತೆ ಅನೇಕರಿದ್ದರು.