ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಅಲ್ಲದೆ ವಾರ್ಡ್‌ಗಳಲ್ಲಿ ಚರಂಡಿ, ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆಂದು ಆಡಳಿತ ರೂಢ ಪಕ್ಷದ ಸದಸ್ಯರೇ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಅಭಿಯಂತರರಾದ ಶಿವಪ್ರಸಾದ್ ಹಾಗೂ ಪ್ರಸಾದ್ ಮತ್ತು ಸಂತೋಷ್ ಪಾಟೀಲ್ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿರುವ ಕುರಿತು ಮಾಹಿತಿ ನೀಡಿದರೂ ಯಾರು ಗಮನ ಹರಿಸುತ್ತಿಲ್ಲ. ಇದರಿಂದಾಗಿ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ಈ ನಡುವೆ ಅಧಿಕಾರಿಗಳು ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸದಸ್ಯರಾದ ಬಿ.ಕೆ.ಮೋಹನ್, ಬಿ.ಟಿ.ನಾಗರಾಜ್, ಚನ್ನಪ್ಪ, ವಿ.ಕದಿರೇಶ್, ಟಿಪ್ಪುಸುಲ್ತಾನ್, ಕೆ.ಸುದೀಪ್ ಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಸುಮಾರು ಅರ್ಧ ತಾಸು ಅಧಿಕಾರಿಗಳ ವರ್ತನೆ ಹಾಗೂ ವಾರ್ಡ್‌ಗಳಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.ಈ ವೇಳೆ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಮಾತನಾಡಿ, ೧ ವಾರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಸುಮಾರು ೬ ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ವಾರ್ಡ್‌ಗಳ ನಿವಾಸಿಗಳು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಕಾಮಗಾರಿ ತಕ್ಷಣ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಲವು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಅಳಲು ತೋರ್ಪಡಿಸಿಕೊಂಡರು.
ಈ ನಡುವೆ ಸದಸ್ಯ ಚನ್ನಪ್ಪ ಮಾತನಾಡಿ, ಕಾಮಗಾರಿ ಮುಕ್ತಾಯಗೊಳಿಸುವುದು ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಈಗಾಗಲೇ ಮುಂಗಡ ಹಣ ಸಹ ಪಾವತಿಸಲಾಗಿದೆ. ಆದರೂ ಕಾಮಗಾರಿ ಪೂರ್ಣಗೊಳಿಸದಿರುವುದು ಸರಿಯಲ್ಲ ಎಂದರು.
ನಗರಸಭೆ ಉಪಾಧ್ಯಕ್ಷ ಎಂ.ಮಣಿ ಎಎನ್‌ಎಸ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಉಪಸ್ಥಿತರಿದ್ದರು.