ರೈತರಿಗೆ ಎಕರೆಗೆ ₹30 ಸಾವಿರ ಬರ ಪರಿಹಾರ ನೀಡಿ : ರಾಜುನಾಯಕ

KannadaprabhaNewsNetwork |  
Published : Sep 24, 2026, 02:30 AM IST
ಕಂಪ್ಲಿ ಅತಿಥಿಗೃಹ ಆವರಣದಲ್ಲಿ ಬುಧವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಮಾತನಾಡಿದರು. ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಕೃಷಿ ಚಟುವಟಿಕೆಗಳಿಗೆ ಮಾಡಿರುವ ವೆಚ್ಚವೂ ವಾಪಸ್ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ

ಕಂಪ್ಲಿ: ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಬರ ಪರಿಸ್ಥಿತಿಯಿಂದ ಹಾನಿಗೊಳಗಾದ ರೈತರಿಗೆ ಸರ್ಕಾರ ಕೂಡಲೇ ಎಕರೆಗೆ ₹30 ಸಾವಿರ ಪರಿಹಾರ ಧನ ವಿತರಿಸಬೇಕು. ರೈತರ ಸಾಲ ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ಕೃಷಿಕರಿಗೆ ನೆರವಾಗಬೇಕು ಎಂದು ಕರ್ನಾಟಕ ಪ್ರದೇಶ ಜನತಾದಳ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಒತ್ತಾಯಿಸಿದರು.

ಪಟ್ಟಣದ ಅತಿಥಿಗೃಹ ಆವರಣದಲ್ಲಿ ಬುಧವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಮಾಡಿರುವ ವೆಚ್ಚವೂ ವಾಪಸ್ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸಮರ್ಪಕ ಬರ ಪರಿಹಾರ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಎಕರೆಗೆ ₹30 ಸಾವಿರ ಪರಿಹಾರ ನೀಡುವುದರ ಜತೆಗೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಮುಂಬರುವ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪಕ್ಷದ ಸಂಘಟನೆ ಬಲಪಡಿಸಲು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ರಾಜುನಾಯಕ ಕರೆ ನೀಡಿದರು.

ತಾಲೂಕಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಅವರು, ಪ್ರಜಾಸೌಧ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದರೂ ಇನ್ನೂ ಉದ್ಘಾಟನೆಯಾಗಿಲ್ಲ. ಕಟ್ಟಡದ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡುಬಂದಿದೆ ಎಂದು ಆರೋಪಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅದೇ ರೀತಿ ನೂತನ ಐಬಿ ಕಟ್ಟಡವೂ ನಿರ್ಮಾಣಗೊಂಡಿದ್ದರೂ ಉದ್ಘಾಟನೆಯಾಗದೆ ಇರುವುದರಿಂದ ಸಾರ್ವಜನಿಕರಿಗೆ ಅದರ ಪ್ರಯೋಜನ ದೊರೆಯುತ್ತಿಲ್ಲ. ಕೂಡಲೇ ಕಟ್ಟಡ ಉದ್ಘಾಟಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ಬಹುದಿನಗಳ ಬೇಡಿಕೆಯಾಗಿರುವ ನದಿ ಸೇತುವೆ ನಿರ್ಮಾಣ ಕಾಮಗಾರಿಗೆ ಕೂಡಲೇ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡುವಂತೆ ಶಾಸಕರು ಕ್ರಮ ಕೈಗೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಬೇಕು ಎಂದರು.

ದರೋಜಿ–ಕಂಪ್ಲಿ ಮಾರ್ಗವಾಗಿ ಗಂಗಾವತಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಕಾಮಗಾರಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಶಾಸಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ರೈಲ್ವೆ ಯೋಜನೆಗೆ ವೇಗ ನೀಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಜೆಡಿಎಸ್ ಪದಾಧಿಕಾರಿಗಳಾದ ಹೊನ್ನೂರಸ್ವಾಮಿ, ಎ.ಎಸ್. ವಸಂತಕುಮಾರ್, ಮಲ್ಲಿಕಾರ್ಜುನ, ಮೇಘರಾಜ, ಇರ್ಫಾನ್ ಗುತ್ತಿ, ಜಗದೀಶ ಪೂಜಾರ್, ನಾಗರಾಜ, ಮಂಜುನಾಥ ಕುಕನೂರು, ದೇವಪ್ಪ ಹಳ್ಳಿಗುಡಿ, ಹನುಮಂತಪ್ಪ ಬೇವೂರು, ವೀರಣ್ಣ ನಾಗಲೀಕರ, ವಿರುಪಾಕ್ಷಿ, ನಿಂಗಪ್ಪ, ದೊಡ್ಡಬಸಪ್ಪ, ವೀರೇಶ್, ರಾಜೇಶ್, ಸಂಗಯ್ಯ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆ-ಬೆಳೆ ಸಮೃದ್ಧಿಗೆ ಜೋಕುಮಾರನ ಆರಾಧನೆ
ಹೊಸ ಯೋಚನೆಗಳ ಹರಿಕಾರ ಚಿದಂಬರರಾವ್‌ ಜಂಬೆ