ಕಾರವಾರ: ಕಿನ್ನರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ, ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿ, ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.ಶನಿವಾರ ಕಾರವಾರ ತಾಲೂಕು ಕಿನ್ನರ ಗ್ರಾಮ ಪಂಚಾಯಿತಿನಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.ಕಿನ್ನರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿರುವ ಮತ್ತು ಬಾವಿಗಳಲ್ಲಿ ಉಪ್ಪು ನೀರು ಸೇರ್ಪಡೆಯಾಗುತ್ತಿರುವ ಕುರಿತ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಲ್ಲಿಸಿದ ಮನವಿಯ ಕುರಿತು ಮಾತನಾಡಿದ ಜಿಲ್ಲಾಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯಿಂದ ಈ ಭಾಗದಲ್ಲಿ ಉಪ್ಪುನೀರಿನ ಸಮಸ್ಯೆ ತಡೆಗೆ ಖಾರ್ಲ್ಯಾಂಡ್ ನಿರ್ಮಾಣ ಮಾಡುವ ಕುರಿತಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಕುರಿತಂತೆ ಪರಿಶೀಲಿಸಿ ಆದಷ್ಟು ಶೀಘ್ರದಲ್ಲಿ ಈ ಸಮಸ್ಯಗೆ ಪರಿಹಾರ ಒದಗಿಸಲಾಗುವುದು ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಈ ಭಾಗದಲ್ಲಿ ನೀರಿನ ಸಮಸ್ಯೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಶಾಶ್ವತ ಪರಿಹಾರ ಒದಗಿಸಲಾಗುವುದು. ಈ ಯೋಜನೆಯು ಮಾರ್ಚ್ ಅಂತ್ಯದೊಳಗೆ ಮುಕ್ತಾಯವಾಗಲಿದೆ ಎಂದರು.ಈ ಭಾಗದಲ್ಲಿ ಕಾಳಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ದೂರಿನ ಕುರಿತಂತೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಮೂಲಕ ಇಲ್ಲಿ ಚೆಕ್ ಪೋಸ್ಟ್ ಆರಂಭಿಸಿ ಈ ಅಕ್ರಮವನ್ನು ತಡೆಯುವುದಾಗಿ ತಿಳಿಸಿದರು.ಹೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಲೈನ್‌ಗಳ ದುರಸ್ತಿ, ವಿದ್ಯುತ್ ಕಂಬಗಳ ಸ್ಥಳಾಂತರ ಮತ್ತು ಅರಣ್ಯ ಇಲಾಖೆಯಿಂದ ಅಪಾಯಕಾರಿ ಮರಗಳ ತೆರವು ಕುರಿತು ಸಲ್ಲಿಕೆಯಾಗಿರುವ ದೂರುಗಳನ್ನು, ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ನಿಯಂತ್ರಣ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು 40ಕ್ಕೂ ಅಧಿಕ ದೂರುಗಳು ಸಲ್ಲಿಕೆಯಾಗಿದ್ದು, ಈ ಎಲ್ಲ ದೂರುಗಳಿಗೆ ನಿಗದಿತ ಅವಧಿಯೊಳಗೆ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಸಭೆಯಲ್ಲಿ ಕಾರವಾರ ಉಪ ವಿಭಾಗಾಧಿಕಾರಿ ರಮ್ಯಾ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ತಾಪಂ ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಏನಗೌಡರ, ಡಿವೈಎಸ್ಪಿ ಗಿರೀಶ್ ಹಾಗೂ ಎಲ್ಲಾ ಇಲಾಖಾಧಿಕಾರಿಗಳು ಇದ್ದರು.