ರೋಣ: ಬಿಸಿಎಂ ಹಾಗೂ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ಸು, ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಬುಧವಾರ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪಟ್ಟಣದ ಪೋತದಾರ ರಾಜನ ಕಟ್ಟೆ ಬಳಿ ಪ್ರತಿಭಟನೆ ಜರುಗಿತು.
ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1.258 ಹಾಸ್ಟೆಲ್‌ಗಳಿದ್ದು 1,68,833 ವಿದ್ಯಾರ್ಥಿಗಳು ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು, 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಹಿಂದಿನ ವರ್ಷಗಳ ಸರ್ಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವುದು. ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾನಿಧಿ ರದ್ದುಗೊಳಿಸಿರುವುದು, ಇನ್ನುಳಿದ ವಿದ್ಯಾರ್ಥಿ ವೇತನ ಸರಿಯಾಗಿ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಉಪ ತಹಸೀಲ್ದಾರ್ ಜೆ.ಟಿ. ಕೊಪ್ಪದ ಮನವಿ ಸ್ವೀಕರಿಸಿದರು. ಎಬಿವಿಪಿ ತಾಲೂಕು ಸಂಚಾಲಕ ವೀರೇಶ ಉಳ್ಳಾಗಡ್ಡಿ, ಎಸ್.ಪಿ. ಕುರಿ, ಸಹ ಕಾರ್ಯದರ್ಶಿ ಶಿವಕುಮಾರ ಬನಪ್ನವರ, ಭೀಮಪ್ಪ ಬಾವಿ, ಶರಣಪ್ಪ ಮುದಿಗೌಡ್ರ, ದಶರಥ, ಮುತ್ತಣ್ಣ ಭಾಗವಹಿಸಿದ್ದರು.