ರೋಗಿಗಳಿಗೆ ಸಮರ್ಪಕ ಸೇವೆ ಒದಗಿಸಿ: ಸಂಸದ ಸುನೀಲ್ ಬೋಸ್

KannadaprabhaNewsNetwork |  
Published : Aug 26, 2026, 01:45 AM IST
ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮರ್ಪಕ ಸೇವೆ ಒದಗಿಸಿ :ಸಂಸದ ಸುನೀಲ್ ಬೋಸ್ ತಾಕೀತು  | Kannada Prabha

ಸಾರಾಂಶ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್), ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸಂಸದ ಸುನೀಲ್ ಬೋಸ್ ತಾಕೀತು ಮಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್), ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸಂಸದ ಸುನೀಲ್ ಬೋಸ್ ತಾಕೀತು ಮಾಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಬಡವರಾಗಿದ್ದು, ವೈದ್ಯಕೀಯ ಚಿಕಿತ್ಸಾ ಸೇವೆ ಸಕಾಲಕ್ಕೆ ದೊರೆಯದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ವೈದ್ಯರು ಆಸ್ಪತ್ರೆಗಳಲ್ಲಿ ಲಭ್ಯರಿದ್ದು, ರೋಗಿಗಳಿಗೆ ಸ್ಪಂದಿಸಬೇಕು. ನಿಗದಿತ ಅವಧಿಯಲ್ಲಿ ವೈದ್ಯರು ಕಡ್ಡಾಯವಾಗಿ ಆಸ್ಪತ್ರೆಯಲ್ಲಿಯೇ ಇರಬೇಕು. ರೋಗಿಗಳಿಗೆ ವೈದ್ಯರು ಸಿಗದೆ ಇರುವ ದೂರುಗಳು ಮತ್ತೆ ಕೇಳಿ ಬಂದಲ್ಲಿ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ವೈದ್ಯಕೀಯ ಕಾಲೇಜಿನ ಡೀನ್ ಪ್ರತಿನಿತ್ಯ ವೈದ್ಯರ ಹಾಜರಾತಿಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಕರ್ತವ್ಯದ ಪೂರ್ಣ ಅವಧಿಯಲ್ಲಿ ವೈದ್ಯರು ಇದ್ದು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೈದ್ಯರ ಗೈರು ಹಾಜರಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಇನ್ನು ಮುಂದೆ ಕಟ್ಟುನಿಟ್ಟಾಗಿ ವೈದ್ಯರ ಸೇವೆ ದೊರೆಯಬೇಕು ಎಂದು ಸೂಚನೆ ನೀಡಿದರು.

ಅಪಘಾತ ತಪ್ಪಿಸಿ:

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ತೊಂದರೆಯಾಗದಂತೆ ರಸ್ತೆಯ ಎರಡೂ ಬದಿಯಲ್ಲಿ ಹಾಗೂ ಡಿವೈಡರ್‌ಗಳಲ್ಲಿ ರಿಫ್ಲೆಕ್ಟರ್ ಹಾಕಬೇಕು. ರಸ್ತೆಗಳು ಕೂಡುವ ಜಂಕ್ಷನ್ ಸ್ಥಳಗಳಲ್ಲಿ ವೃತ್ತ ನಿರ್ಮಿಸಬೇಕು. ಸೈನ್ ಬೋರ್ಡ್ ಗಳನ್ನು ಅಳವಡಿಸಬೇಕು. ರಸ್ತೆಗಳ ಕಟಿಂಗ್ ಕ್ರಾಸ್‌ಗಳಲ್ಲಿ ಮಿರರ್ ಹಾಕಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿ ಪ್ರಗತಿ ಪರಿಶೀಲಿಸಿದ ವೇಳೆ ಅಧಿಕಾರಿಗಳು ಮಾಹಿತಿ ನೀಡಿ ಅಮೃತ್ ೨.೦ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಅಳವಡಿಕೆ ಕಾಮಗಾರಿ ಗುಂಡ್ಲುಪೇಟೆ ತಾಲೂಕಿನಲ್ಲಿ ಪೂರ್ಣಗೊಂಡಿದೆ. ಚಾಮರಾಜನಗರ ತಾಲೂಕಿನಲ್ಲಿ ಒಂದು ವಾರದೊಳಗೆ ಪೂರ್ಣಗೊಳಿಸಲಾಗುವುದು. ಕೊಳ್ಳೇಗಾಲ ಮತ್ತು ಹನೂರು ತಾಲೂಕುಗಳಲ್ಲಿ ಮುಂದಿನ ೧೫ ದಿನದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.

ಹನೂರು ಭಾಗದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಅಗತ್ಯವಿರುವ ಗ್ರಾಮಗಳಿಗೆ ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಬೇಕು. ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು. ಗಾಳಿಪುರದಲ್ಲಿ ಕುಡಿಯುವ ನೀರಿಗಾಗಿ ೧೨ ವರ್ಷಗಳ ಹಿಂದೆ ವಾಟರ್‌ಟ್ಯಾಂಕ್ ಕಟ್ಟಿ ಹಾಗೆಯೇ ಬಿಡಲಾಗಿದ್ದು, ಇದರ ಬಳಕೆಯಾಗಿಲ್ಲ. ಇದರಿಂದ ಜನರ ತೆರಿಗೆ ಹಣ ಪೋಲಾಗಿದೆ. ಕುಡಿಯುವ ನೀರು ಸರಬರಾಜು ವಿಚಾರದಲ್ಲಿ ಅಧಿಕಾರಿಗಳು ಯಾವುದೇ ಸಬೂಬು ಹೇಳುವಂತಿಲ್ಲ. ಜನರಿಗೆ ಆದ್ಯತೆ ಮೇರೆಗೆ ಕುಡಿಯುವ ನೀರು ಒದಗಿಸುವಂತೆ ತಿಳಿಸಿದರು.

ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ, ಗಣಿ ಇಲಾಖೆ, ಬಿಎಸ್.ಎನ್.ಎಲ್ ಸೇರಿದಂತೆ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪ ಕಾರ್ಯದರ್ಶಿ ಡಿ.ಸಿ.ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ 18 ಸಾವಿರ ಮತದಾರರು ಹೊರಕ್ಕೆ
ಪಡಿತರ ಕಾರ್ಡ್ ಹೊಂದಿರುವ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿ: ಮೂಡ್ಲೀಗೌಡ