ಉಡುಪಿ: ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಉಡುಪಿವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರ್ಕಾರದ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಅವರು ಮಂಗಳವಾರ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು ಸಾಧ್ಯ ಎಂದ ಅವರು, ವಿಕಲಚೇತನರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳ ಬಗ್ಗೆ ಮಾಹಿತಿಯನ್ನು ಸಮರ್ಪಕವಾಗಿ ತಲುಪಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೇಶ್ ಮಾತನಾಡಿ, ವಿಕಲಚೇತನರಿಗಾಗಿ ಕಾನೂನು ಅಡಿಯಲ್ಲಿ ಅನೇಕ ಹಕ್ಕುಗಳನ್ನು ನೀಡಿದ್ದು, ಅವರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ತರದಂತೆ ವಿಕಲಚೇತನರ ಅಭಿವೃದ್ಧಿಯಲ್ಲಿ ಸಹಕಾರ ನೀಡಬೇಕು ಎಂದು ಹೇಳಿದರು.ನಗರಾಭಿವೃಧ್ದಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು ಹಾಗೂ ಡಿಡಿಪಿಐ ಗಣಪತಿ ಮಾತನಾಡಿದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಶೇಷಚೇತನರನ್ನು ಸನ್ಮಾನಿಸಲಾಯಿತು. ವಿಶೇಷ ಮಕ್ಕಳಿಗೆ ಹಾಗೂ ವಿಕಲಚೇತನರ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಶೇಷ ಶಾಲಾ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಿತು. ವಿಶೇಷ ಶಾಲಾ ಮಕ್ಕಳು ಹಾಗೂ ವಿಕಲಚೇತನರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ನಗರಸಭಾ ಸದಸ್ಯ ವಿಜಯ್ ಕೊಡವೂರು, ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಜಿಲ್ಲಾ ಆ.ಕು.ಕ. ಅಧಿಕಾರಿ ಡಾ. ಐ.ಪಿ. ಗಡಾದ್, ವಿ.ಹಿ.ನಾ.ಸ. ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಭಟ್, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಆಗ್ನೇಸ್ ಕುಂದರ್, ಪಾಲಕರ ಹಾಗೂ ಪೋಷಕರ ಸಂಘದ ಅಧ್ಯಕ್ಷ ಜಯ ವಿಠಲ್ ಉಪಸ್ಥಿತರಿದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಶೇಷ ಶಿಕ್ಷಕ ಸಂಘದ ಜಿಲ್ಲಾ ಅಧ್ಯಕ್ಷ ರವೀಂದ್ರ ಎಚ್. ಹಾಗೂ ವಿಕಲಚೇತನರ ಶಿಕ್ಷಕ ಹಾಗೂ ಶಿಕ್ಷಕಿಯರ ಸಂಘದ ರಾಜ್ಯ ಅಧ್ಯಕ್ಷೆ ಡಾ.ಕಾಂತಿ ನಿರೂಪಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ವಂದಿಸಿದರು.