ಕಾರವಾರ: ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಕೈಗಾರಿಕೆಗಳ ಬೆಳವಣಿಗೆಗೆ ಎಲ್ಲ ರೀತಿಯ ನೆರವು ಒದಗಿಸುವಂತೆ ಕೈಗಾರಿಕೆ ಇಲಾಖೆ ಮತ್ತು ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ದಾಂಡೇಲಿ ಕೈಗಾರಿಕಾ ವಸಾಹತುವಿನಲ್ಲಿ ಹಂಚಿಕೆಯಾಗಿರುವ ನಿವೇಶನಗಳ ನೋಂದಣಿ ಕುರಿತಂತೆ ಇರುವ ಸಮಸ್ಯೆಯನ್ನು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಭೂ ದಾಖಲೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಒಂದು ವಾರದ ಒಳಗೆ ಸಭೆ ನಡೆಸಿ, ಸಮಸ್ಯೆಯನ್ನು ಬಗೆಹರಿಸಬೇಕು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಿಂದ ಸುತ್ತಮುತ್ತಲಿನ ಜನ ವಸತಿ ಪ್ರದೇಶ ಸೇರಿದಂತೆ ಯಾವುದೇ ಪ್ರದೇಶದಲ್ಲಿ ವಾಯು ಮಾಲಿನ್ಯ ಮತ್ತು ಜಲ ಮಾಲಿನ್ಯ ಆಗದಂತೆ ನಿಯಮಿತವಾಗಿ ಈ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಜಯಂತ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಜಿಲ್ಲಾ ಪರಿಸರ ಅಧಿಕಾರಿ ಸಂತೋಷ್ ಹಾಗೂ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳು ಇದ್ದರು.