ಕನ್ನಡಪ್ರಭ ವಾರ್ತೆ ತುಮಕೂರು ನಗರದ ವಿವಿಧ ವಿದ್ಯಾರ್ಥಿನಿಲಯಗಳಿಗೆ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿರುವ ಅವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಕಳೆದ 12 ದಿನಗಳ ಹಿಂದೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದ ನಗರದ ಬಿ.ಎಚ್. ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ಪರಿಶಿಷ್ಟ ಜಾತಿ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮಾತನಾಡಿದರು. ಈ ವಿದ್ಯಾರ್ಥಿ ನಿಲಯಕ್ಕೆ ಮಂಜೂರಾದ ಸಂಖ್ಯಾ ಬಲಕ್ಕಿಂತ 3 ಪಟ್ಟು ಹೆಚ್ಚಿನ ವಿದ್ಯಾರ್ಥಿಗಳಿರುವುದು ಹಾಗೂ ಈ ನಿಲಯದಲ್ಲಿ ವಿದ್ಯಾರ್ಥಿಗಳಿಗನುಗುಣವಾಗಿ ಶೌಚಾಲಯ, ಸ್ನಾನಗೃಹ ಸೇರಿದಂತೆ ಮತ್ತಿತರ ವ್ಯವಸ್ಥೆಗಳಿಲ್ಲದಿರುವುದು ನನ್ನ ಗಮನಕ್ಕೆ ಬಂದಿದೆ. ವಿದ್ಯಾರ್ಥಿ ನಿಲಯಗಳಲ್ಲಿರುವ ವ್ಯವಸ್ಥೆಗನುಗುಣವಾಗಿ ಮಾತ್ರ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕು ಎಂದರು. ಹೊಸ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ತಕ್ಕಂತೆ ಶೌಚಾಲಯ, ಸ್ನಾನಗೃಹಗಳ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪಗೆ ಸೂಚನೆ ನೀಡಿದರು. ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಕೊರತೆ, ಅಗ್ನಿ ಅವಘಡಗಳಂತಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಭಾರಿ ಮಳೆಯಿಂದ ಸೋಲಾರ್ ನೀರು ಪೂರೈಕೆಯಾಗದ ಕಾರಣ ಎಲ್ಲ ವಿದ್ಯಾರ್ಥಿಗಳು ಏಕ ಕಾಲದಲ್ಲಿ ಬಿಸಿನೀರು ಕಾಯಿಸಲು ವಿದ್ಯುತ್ ಕಾಯಿಲ್ ಬಳಸಿದ್ದರಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ವರದಿಯಿಂದ ತಿಳಿದು ಬಂದಿದೆ. ಹೆಚ್ಚಿನ ದುರಂತ ಸಂಭವಿಸದಂತೆ ಕೂಡಲೇ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆ ಕೈಗೊಂಡ ಕ್ರಮದಿಂದ ಅನಾಹುತವನ್ನು ತಪ್ಪಿದೆ. ವಿದ್ಯಾರ್ಥಿ ನಿಲಯದ ಪ್ರತಿ ಮಹಡಿಯಲ್ಲಿಯೂ ಬಿಸಿ ನೀರಿಗಾಗಿ ಗೀಸರ್ ವ್ಯವಸ್ಥೆ ಮಾಡಲು ಹಾಗೂ ಕಾಯಿಲ್ ಬಳಸದಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಬೇಕು ಎಂದು ಹೇಳಿದರು. ಇದಕ್ಕೂ ಮುನ್ನ ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿದರು.
ಶೌಚಾಲಯ ವ್ಯವಸ್ಥೆ ಸರಿಯಿಲ್ಲದಿರುವ ಬಗ್ಗೆ ವರದಿಯಾಗಿದ್ದ ಹಿನ್ನೆಲೆಯಲ್ಲಿ ಈ ಭೇಟಿ ನೀಡಲಾಗಿದೆ. ಕಟ್ಟಡದಲ್ಲಿ ಶೌಚಾಲಯ ಸಮಸ್ಯೆ ಇರುವುದರಿಂದ ವಿದ್ಯಾರ್ಥಿನಿಲಯವನ್ನು ಉಪ್ಪಾರಹಳ್ಳಿಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಭಾಗಶಃ ವಿದ್ಯಾರ್ಥಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ಇನ್ನೊಂದು ವಾರದೊಳಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದರು.ನಂತರ ಉಪ್ಪಾರಹಳ್ಳಿ ಹೊಸ ಕಟ್ಟಡಕ್ಕೂ ಭೇಟಿ ನೀಡಿದ ಅವರು ಹೊಸ ಕಟ್ಟಡವು ಕುಡಿಯುವ ನೀರು, ಶೌಚಾಲಯ, ಅಡುಗೆ ಕೋಣೆ, ವಸತಿ ಕೊಠಡಿಗಳು ಸ್ವಚ್ಛತೆ ಸೇರಿ ಉತ್ತಮ ವ್ಯವಸ್ಥೆಗಳಿಂದ ಕೂಡಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಸ್ಟೆಲ್ ಭೇಟಿಯಲ್ಲಿ ಕಂಡು ಬಂದ ನ್ಯೂನ್ಯತೆಗಳನ್ನು ಸರಿಪಡಿಸಲು ಶಿಫಾರಸು ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ತಿಳಿಸಿದರು. ತಹಸೀಲ್ದಾರ್ ಸಿದ್ದೇಶ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ದಿನೇಶ್, ಬಿಸಿಎಂ ಇಲಾಖೆಯ ರಂಗಸ್ವಾಮಿ ಉಪಸ್ಥಿತರಿದ್ದರು.