ಕನ್ನಡಪ್ರಭ ವಾರ್ತೆ ಬೆಳಗಾವಿ
ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿಗಳ ಪ್ರಾರಂಭೋತ್ಸವದ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದರು. ಶಾಲೆ ಹಾಗೂ ಅಂಗನವಾಡಿಗಳ ಒಳ ಹಾಗೂ ಹೊರಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಆದ್ಯತೆ ನೀಡಬೇಕು. ಆಹಾರ ಪದಾರ್ಥಗಳ ದಾಸ್ತಾನು ಕೊಠಡಿಯನ್ನು ಶುಚಿಯಾಗಿಟ್ಟುಕೊಳ್ಳಬೇಕು. ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಕುಡಿಯುವ ನೀರು, ವಿದ್ಯುತ್ ಸೇರಿ ಇನ್ನಿತರೇ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.
ಕಟ್ಟಡಗಳ ಸ್ಥಿತಿಗತಿ ಪರಿಶೀಲಿಸಿ:ಎಲ್ಲ ಗ್ರಾಪಂ, ಸ್ಥಳೀಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಸ್ಥಿತಿಗತಿಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಳೆಗಾಲ ಆರಂಭಕ್ಕೂ ಮೊದಲೇ ಪರಿಶೀಲಿಸಿ ಅಗತ್ಯಬಿದ್ದರೆ ಬೇರೆ ಕಟ್ಟಡಗಳಲ್ಲಿ ಸ್ಥಳಾಂತರಕ್ಕೆ ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು. ಶಾಲೆ ಹಾಗೂ ಅಂಗನವಾಡಿಗಳಿಗೆ ಪೂರೈಕೆಯಾಗುವ ಕುಡಿಯುವ ನೀರನ್ನು ಎಫ್.ಟಿ.ಕೆ. ಕಿಟ್ ಮೂಲಕ ಪರಿಶೀಲಿಸಿ ನಂತರ ಪೂರೈಕೆ ಮಾಡಬೇಕು. ಶಾಲೆಗಳ ಸುತ್ತಮುತ್ತ ಅಪಾಯಕಾರಿ ವಿದ್ಯುತ್ ತಂತಿ, ವಿದ್ಯುತ್ ದೀಪ ಇತ್ಯಾದಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದರು.
ಜೂನ್-1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಎಲ್ಲ ಶಾಲೆಗಳಲ್ಲಿ ಸಂಭ್ರಮದಿಂದ ಆಚರಿಸಬೇಕು. ಯಾವ ಮಕ್ಕಳು ಕೂಡ ಶಾಲೆಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮನವೊಲಿಸಿ ಶಾಲೆಗೆ ಕರೆತರುವ ಕಾರ್ಯ ಮಾಡಬೇಕು. ಅಂಗನವಾಡಿಗಳಲ್ಲಿ ತಿಂಗಳ ಮೂರನೇ ಶನಿವಾರ ಹಾಗೂ ಶಾಲೆಗಳಲ್ಲಿ ತಿಂಗಳ 4ನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಎಲ್ಲ ವಸತಿ ನಿಲಯಗಳಲ್ಲಿಯೂ ಕೂಡ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಮುಖ್ಯವಾಗಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಅಗತ್ಯ ಭದ್ರತಾ ಸಿಬ್ಬಂದಿ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈ ಹಿಂದಿನಂತೆ ಈ ವರ್ಷವೂ ಸಂಜೆಯ ವೇಳೆ ಮಕ್ಕಳಿಗೆ ಆನಲೈನ್ ತರಗತಿಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.