ಗದಗ: ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು ಸುಸಜ್ಜಿತ ವ್ಯವಸ್ಥೆ ಒಳಗೊಂಡಂತೆ ಮಾದರಿಯಾಗಬೇಕು ಹಾಗೂ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಪುನರ್ ನಿರ್ಮಾಣ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ರಮಣದೀಪ್ ಚೌಧರಿ ತಿಳಿಸಿದರು.
ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಅಂಗನವಾಡಿಗಳಿಗೆ ಬೇಕಾಗಿರುವ ಮೂಲ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಂದ ಮಾಹಿತಿ ಪಡೆದ ನಂತರ ನಿರ್ದೇಶನ ನೀಡಿದರು. ನಿವೇಶನವಿರುವ ಕಡೆಗೆ ಹೊಸ ಅಂಗನವಾಡಿ ಕಟ್ಟಡ ಕಟ್ಟಲು ಕ್ರಮ ಕೈಗೊಳ್ಳಬೇಕು ಎಂದರು.
ಸರ್ಕಾರದ ಅನುದಾನ ಸದ್ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ನೀಡಿದ ಅನುದಾನ ಹಿಂದಿರುಗಿ ಹೋಗದಂತೆ ಇಲಾಖೆ ಮುಖ್ಯಸ್ಥರು ಕಾರ್ಯನಿರ್ವಹಿಸಬೇಕು. ಕಾಮಗಾರಿ ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ. ಗುಣಮಟ್ಟದ ಕಾಮಗಾರಿಗೆ ಆದ್ಯತೆ ವಹಿಸಿ ಇಲಾಖಾಧಿಕಾರಿಗಳು ಕಾರ‍್ಯ ನಿರ್ವಹಿಸುವಂತೆ ಸೂಚನೆ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಂಥಾಲಯ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಿದರು. ಹಾಗೂ ಜಿಪಂನ 5 ಇಲಾಖೆಗಳ(ಚೇಂಜ್ ಆಫ್ ವರ್ಕ್) ಕಾರ್ಯ ಬದಲಾವಣೆಯ ಕಾಮಗಾರಿಗಳಿಗೆ ಅನುಮೋದನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಸಿ.ಎನ್. ಶ್ರೀಧರ್, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಪಂ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಚಳಗೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.ಶಾಲಾ ಕಾಲೇಜುಗಳಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಿಗದಗ: ಜಿಲ್ಲೆಯ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಲವರ್ದನೆಗಾಗಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯೋಗಾಭ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ರಮಣದೀಪ್ ಚೌಧರಿ ತಿಳಿಸಿದರು.ಜಿಪಂ ಸಭಾಂಗಣದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.ಕೃಷಿ ಇಲಾಖೆಯ ಉಪನಿರ್ದೇಶಕ ಮಾತನಾಡಿ, ಜಿಲ್ಲೆಯಲ್ಲಿ ಹಿಂಗಾರು ಹಂಗಾಮು ಬಿತ್ತನೆ ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಹಿಂಗಾರು ಹಂಗಾಮಿಗೆ ಕಡಲೆ, ಹಿಂಗಾರಿ ಜೋಳ, ಗೋದಿ, ಸೂರ್ಯಕಾಂತಿ, ಹತ್ತಿ ಮುಖ್ಯ ಬೆಳೆಗಳಾಗಿವೆ. ರೈತರಿಗೆ ವಿತರಿಸಲು ಸದ್ಯ ರಸಗೊಬ್ಬರದ ಸಮಸ್ಯೆ ಇರುವುದಿಲ್ಲ ಎಂದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಮಾತನಾಡಿ, ತೋಟಗಾರಿಕೆ ಕ್ಷೇತ್ರಗಳ ನಿರ್ವಹಣೆ ಯೋಜನೆಯಡಿ ಆ. 31ರ ಅಂತ್ಯದವರೆಗೆ ₹4.19 ಲಕ್ಷ ಗುರಿಯಿದ್ದು, ₹4.07 ಲಕ್ಷ ವೆಚ್ಚ ಮಾಡಿ ಶೇ. 97ರಷ್ಟು ಗುರಿ ಸಾಧಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ₹273 ಲಕ್ಷ ಗುರಿಯಿದ್ದು, ಆ ಪೈಕಿ ₹262.45 ಲಕ್ಷ ವೆಚ್ಚ ಮಾಡಿ ಶೇ. 96ರಷ್ಟು ಗುರಿ ಸಾಧಿಸಲಾಗಿದೆ ಎಂದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿದರು. ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಸಿ.ಎನ್. ಶ್ರೀಧರ್, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಪಂ ಸಿಇಒ ಎ.ಎ. ಕಂಬಾಳಿಮಠ, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಚಳಗೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.