ಕನ್ನಡಪ್ರಭ ವಾರ್ತೆ ಮಂಗಳೂರು ಸರ್ಕಾರದಿಂದ ಒದಗಿಸಲಾಗುವ ಸಬ್ಸಿಡಿ, ವಿವಿಧ ಯೋಜನೆಗಳು ಫಲಾನುಭವಿಗಳಿಗೆ ಸುಲಭವಾಗಿ ಸಿಗುವಂತಾಗಬೇಕು. ಅದಕ್ಕಾಗಿ ಅವರನ್ನು ಅಲೆದಾಡುವಂತೆ ಮಾಡಬಾರದು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜಿಲ್ಲೆಯ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿದ್ದಾರೆ.ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಅವರು ಜಿಲ್ಲಾ ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೀವನ್‌ಜ್ಯೋತಿ ಬಿಮಾ ಯೋಜನೆ, ಪಿಎಂ ಸ್ವ ನಿಧಿ ಯೋಜನೆ ಬಗ್ಗೆ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಪ್ರಯೋಜನ ಪಡೆಯಲು ಬ್ಯಾಂಕ್‌ಗಳು ಆಸಕ್ತಿ ವಹಿಸಬೇಕು. ಎಂದು ಜಿ.ಪಂ. ಸಿಇಒ ಡಾ. ಆನಂದ್ ನಿರ್ದೇಶನ ನೀಡಿದರು.
ಮುದ್ರಾ ಯೋಜನೆಯಡಿ ಜಿಲ್ಲೆಯ ವಿವಿಧ ಬ್ಯಾಂಕ್‌ಗಳಿಗೆ ಪ್ರಸಕ್ತ ಸಾಲಿಗೆ ಒಟ್ಟು 1,300 ಗುರಿ ನೀಡಲಾಗಿದ್ದರೂ ಈವರೆಗೆ ಕೇವಲ 8 ಅರ್ಜಿಗಳು ಮಾತ್ರ ಸ್ವೀಕೃತವಾಗಿರುವ ಬಗ್ಗೆ ಸಂಸದ ಬ್ರಿಜೇಶ್ ಚೌಟ ಅಸಮಾಧಾನ ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿ ಜೀವನ್ ಬಿಮಾ ಯೋಜನೆಯಡಿ ಏಪ್ರಿಲ್ 2024ರಿಂದ ಜೂನ್ 2024ರ ವರೆಗೆ 6,679 ಮಂದಿಯನ್ನು ನೋಂದಣಿ ಮಾಡಲಾಗಿದೆ. ಅಟಲ್ ಪಿಂಚಣಿ ಯೋಜನೆಯಡಿ ಈ ಅವಧಿಯಲ್ಲಿ 12,761, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 18,531 ಮಂದಿಯನ್ನು ನೋಂದಣಿ ಮಾಡಿರುವುದಾಗಿ ದ.ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ವಿವರ ನೀಡಿದರು.
ಕೃಷಿ ಕ್ಷೇತ್ರದಲ್ಲಿ ಕಳೆದ ವರ್ಷವೂ ಜಿಲ್ಲೆಯು ತನ್ನ ಗುರಿ ಮೀರಿ ಸಾಧನೆ ಮಾಡಿದೆ ಎಂದು ನಬಾರ್ಡ್ ಡಿಜಿಎಂ ಸಂಗೀತ ತಿಳಿಸಿದರು.ಆರ್‌ಬಿಐ ಎಜಿಎಂ ಅರುಣ್ ಕುಮಾರ್ ಇದ್ದರು.
ಸಾಲ ಪಡೆಯುವ ಉದ್ದಿಮೆದಾರರಿಗೆ ಅವರ ಖಾತೆಗೆ ಸಬ್ಸಿಡಿ ಹಣವನ್ನು ವರ್ಗಾಯಿಸಲಾಗುತ್ತದೆ. ಆದರೆ ಸಾಲ ಮರುಪಾವತಿ ಬಳಿಕ ಥರ್ಡ್ ಪಾರ್ಟಿಯ ಪರಿಶೀಲನೆ ಆಗಬೇಕಾಗುತ್ತದೆ. ಹಿಂದೆ ಜೆನೆಸಿಸ್ ಸಂಸ್ಥೆ ನಡೆಸುತ್ತಿದ್ದ ಪರಿಶೀಲನೆಯನ್ನು ಈಗ ಕೇಂದ್ರ ಸರ್ಕಾರ ಪೋಸ್ಟಲ್ ಇಲಾಖೆಗೆ ವರ್ಗಾಯಿಸಿದೆ. ಎಲ್ಲ ರಾಜ್ಯಗಳಲ್ಲೂ ಈ ಬಗ್ಗೆ ಪ್ರಕ್ರಿಯೆಗಳು ನಡೆಯುತ್ತಿದ್ದು ಇದರಿಂದಾಗಿ ಸಬ್ಸಿಡಿ ವಿತರಣೆ ವಿಳಂಬವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರಗಳ ಸಹಾಯಕ ವ್ಯವಸ್ಥಾಪಕ ಅನಿಲ್ ಕುಮಾರ್ ಮಾಹಿತಿ ನೀಡಿದರು.ಕಳೆದ ಒಂದೂವರೆ ವರ್ಷದಿಂದ ಈ ಸಮಸ್ಯೆಯಾಗುತ್ತಿದ್ದರೂ ಇದನ್ನು ಸಂಬಂಧಪಟ್ಟವರ ಗಮನಕ್ಕೆ ತಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಬ್ರಿಜೇಶ್ ಚೌಟ, ಇಂತಹ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಬಗೆಹರಿಸಲು ಸಹಕರಿಸಬೇಕು ಎಂದು ತಾಕೀತು ಮಾಡಿದರು.