ರಾಮನಗರ: ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳ ಜೀವನವನ್ನು ಮೇಲ್ದರ್ಜೆಗೇರಿಸುವ ಸದುದ್ದೇಶದಿಂದ ಸರ್ಕಾರವು ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರಿ ಸವಲತ್ತುಗಳನ್ನು ಸಂಪೂರ್ಣವಾಗಿ ಒದಗಿಸಲು ಕ್ರಮವಹಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪೌರಕಾರ್ಮಿಕರು, ಮ್ಯಾನ್ಯುಯೆಲ್ ಸ್ಕ್ಯಾವೆಂಜರ್ಸ್ ಅವರು ಕಾರ್ಯನಿರ್ವಹಿಸಲು ಅವಶ್ಯವಿರುವ ಸಮವಸ್ತ್ರ, ಮಾಸ್ಕ್, ಗ್ಲೌಸ್, ಇತರೆ ಸಲಕರಣೆ-ಸಾಮಗ್ರಿಗಳನ್ನು ಸಮರ್ಪಕವಾಗಿ ಒದಗಿಸಬೇಕು ಹಾಗೂ ಅವರಿಗೆ ನಿವೇಶನ, ವಸತಿ ಸೌಲಭ್ಯ, ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಮತ್ತು ಸ್ವ-ಉದ್ಯೋಗಕ್ಕಾಗಿ ಸಾಲ, ಇತರೆ ಸೌಲಭ್ಯಗಳನ್ನು ಯಾವುದೇ ರಾಜಿ ಮಾಡದೆ ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ಹಲವು ಹುದ್ದೆಗಳು ಖಾಲಿ ಇದ್ದು ಇಬ್ಬರು ನಿರ್ವಹಿಸುವ ಕೆಲಸವನ್ನು ಒಬ್ಬರೇ ನಿರ್ವಹಿಸುತ್ತಿದ್ದು ಅವರಿಗೆ ಕೆಲಸದ ಒತ್ತಡ ಹಾಗೂ ಅನಾರೋಗ್ಯ ಉಂಟಾಗುತ್ತಿದೆ. ಪೌರಕಾರ್ಮಿಕರ ಆರೋಗ್ಯ ಕಾಳಜಿಯ ಹಿತದೃಷ್ಟಿಯಿಂದ ಅವರಿಗೆ ಆರೋಗ್ಯ ವಿಮೆ ಒದಗಿಸಬೇಕು, ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳು, ಸರ್ಕಾರಿ ಯೋಜನೆಗಳು, ಸಾಲ ಸೌಲಭ್ಯಗಳು ತಲುಪದಿದ್ದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್ ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದ ಅವರು ಖಾಯಂ ಅಥವಾ ಹೊರಗುತ್ತಿಗೆ ಪೌರಕಾರ್ಮಿಕರು ಸೇವೆಯಲ್ಲಿದ್ದಾಗ ಮರಣ ಹೊಂದಿದ್ದಲ್ಲಿ ಅವರ ಕುಟುಂಬದವರಿಗೆ ಕೆಲಸ ಇಲ್ಲವೇ ಪರಿಹಾರ ಮೊತ್ತವನ್ನು ಕಡ್ಡಾಯವಾಗಿ ಪಾವತಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ್ , ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ದೀಪ ಎಸ್. ಬಳ್ಳಾರಿ, ಸಫಾಯಿ ಕರ್ಮಚಾರಿ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ನಗರಸಭೆ ಪೌರಾಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ ಅಧಿಕಾರಿ ಉಪಸ್ಥಿತರಿದ್ದರು.
ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು.