ಬೆಳೆಹಾನಿಗೊಳಗಾದ ಅರ್ಹ ರೈತರಿಗೆ ತ್ವರಿತ ಪರಿಹಾರ ಒದಗಿಸಿ

KannadaprabhaNewsNetwork |  
Published : Sep 17, 2026, 02:45 AM IST
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸುವರ್ಣ ಸೌಧದಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು | Kannada Prabha

ಸಾರಾಂಶ

ಮಳೆ ಕೊರತೆಯಿಂದ ಬೆಳೆಹಾನಿಗೊಳಗಾದ ಅರ್ಹ ರೈತರಿಗೆ ನಿಯಮಾನುಸಾರ ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಳೆ ಕೊರತೆಯಿಂದ ಬೆಳೆಹಾನಿಗೊಳಗಾದ ಅರ್ಹ ರೈತರಿಗೆ ನಿಯಮಾನುಸಾರ ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.

ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಬುಧವಾರ ನಡೆದ 2026-27ನೇ ಸಾಲಿನ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರು, ಕೃಷಿ, ಬೆಳೆ ವಿಮೆ, ನೀರಾವರಿ ಹಾಗೂ ಜಾನುವಾರುಗಳಿಗೆ ಮೇವು ಸೇರಿದಂತೆ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಬೈಲಹೊಂಗಲ, ಬೆಳಗಾವಿ, ಸವದತ್ತಿ ಹಾಗೂ ಮೂಡಲಗಿ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಬೆಳೆಹಾನಿಯ ಬಗ್ಗೆ ತ್ವರಿತವಾಗಿ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳಲ್ಲಿ ಉದ್ದು ಮತ್ತು ಹೆಸರು ಬೆಳೆಗಳಿಗೆ ಹಾನಿಯಾಗಿರುವ ಮಾಹಿತಿಯನ್ನು ಪೋರ್ಟಲ್‌ನಲ್ಲಿ ದಾಖಲಿಸಲಾಗುವುದು. ಎನ್‌ಡಿಆರ್‌ಎಫ್ ಮಾನದಂಡಗಳ ವ್ಯಾಪ್ತಿಗೆ ಒಳಪಟ್ಟಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.ಜಿಲ್ಲೆಯ ಆಣೆಕಟ್ಟುಗಳಲ್ಲಿ ಸಂಗ್ರಹವಿರುವ ನೀರನ್ನು ಅಗತ್ಯಕ್ಕೆ ಅನುಗುಣವಾಗಿ ಬಿಡುಗಡೆ ಮಾಡುವ ಕುರಿತು ಕೃಷಿ, ಕಂದಾಯ, ನೀರಾವರಿ, ತೋಟಗಾರಿಕೆ ಹಾಗೂ ಹೆಸ್ಕಾಂ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ ಸಮೀಕ್ಷೆ ನಡೆಸುವಂತೆ ಸಚಿವರು ಸೂಚಿಸಿದರು.

ಸಮೀಕ್ಷಾ ವರದಿ ಆಧರಿಸಿ ನೀರಿನ ಅವಶ್ಯಕತೆವಿರುವ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಹಿಡಕಲ್ ಹಾಗೂ ಕೃಷ್ಣಾ ಜಲಾಶಯಗಳಲ್ಲಿ ಸದ್ಯ ಯಾವುದೇ ತೊಂದರೆ ಇಲ್ಲ. ಆದರೆ, ಮಲಪ್ರಭಾ ಜಲಾಶಯದಿಂದ ಗದಗ, ನವಲಗುಂದ, ಸವದತ್ತಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡುವಲ್ಲಿ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಸಲಹಾ ಸಮಿತಿ ಸಭೆ ಕರೆದು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.ಸೋಯಾಬಿನ್ ಬೆಳೆಯ ಅವಧಿ ಮುಕ್ತಾಯದ ಹಂತದಲ್ಲಿರುವುದರಿಂದ ಕೂಡಲೇ ಬೆಳೆ ಸಮೀಕ್ಷೆ ನಡೆಸಿ, ವಿಮಾ ಪಾವತಿಗೆ ಅಗತ್ಯ ವರದಿ ಸಲ್ಲಿಸುವಂತೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅಧಿಕಾರಿಗಳಿಗೆ ಸೂಚಿಸಿದರು.ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಮಲಪ್ರಭಾ ಅಣೆಕಟ್ಟಿನಿಂದ ಅಗತ್ಯ ಪ್ರಮಾಣದ ನೀರು ಬಿಡುಗಡೆ ಮಾಡಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಮನವಿ ಮಾಡಿದರು. ಯರಗಟ್ಟಿ ಭಾಗದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅಮೃತ್ ಯೋಜನೆಯಡಿ ಹೆಚ್ಚುವರಿ ಅನುದಾನ ನೀಡುವಂತೆಯೂ ಕೋರಿದರು.ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಅಗತ್ಯವಿರುವ ಪ್ರದೇಶಗಳಲ್ಲಿ ನಿಯಮಾನುಸಾರ ಸಮರ್ಪಕವಾಗಿ ಬಳಸಬೇಕು. ಎಸ್‌ಸಿಪಿ-ಟಿಎಸ್‌ಪಿ ಸೇರಿದಂತೆ ವಿವಿಧ ಯೋಜನೆಗಳ ಅನುದಾನ ಸದ್ಬಳಕೆಯಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ಶಾಸಕ ಆಸಿಫ್ (ರಾಜು) ಸೇಠ್ ಆಕ್ಷೇಪ ವ್ಯಕ್ತಪಡಿಸಿದರು. ಅಗತ್ಯವಿರುವ ಕಾಲೋನಿಗಳು ಹಾಗೂ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಬಳಸಬೇಕು ಎಂದರು.ಈ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಅಗತ್ಯ ಪ್ರದೇಶಗಳನ್ನು ಗುರುತಿಸಿ ಅನುದಾನ ಸಮರ್ಪಕವಾಗಿ ಬಳಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿಗೆ ಬಿಡುಗಡೆಯಾದ ಅನುದಾನವನ್ನು ಅಗತ್ಯವಿರುವ ಪ್ರದೇಶಗಳಲ್ಲಿ ಮಾತ್ರ ಬಳಸಬೇಕು. ನವೆಂಬರ್ ನಂತರ ನಗರದಲ್ಲಿ ಎಲ್‌&ಟಿ ಸಂಸ್ಥೆಗೆ ರಸ್ತೆಗಳಲ್ಲಿ ಗುಂಡಿ ತೋಡಲು ಅವಕಾಶ ನೀಡುವುದಿಲ್ಲ. ಹೀಗಾಗಿ ಸಂಸ್ಥೆ ಕೈಗೊಂಡಿರುವ ಎಲ್ಲ ಕಾಮಗಾರಿಗಳನ್ನು ನವೆಂಬರ್‌ಗೂ ಮುನ್ನ ಪೂರ್ಣಗೊಳಿಸಬೇಕು ಎಂದು ಶಾಸಕ ಆಸಿಫ್ (ರಾಜು) ಸೇಠ್ ಸೂಚಿಸಿದರು.ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅತಿ ಕಡಿಮೆ ಅವಧಿಯಲ್ಲಿ4634 ಯೂನಿಟ್ ರಕ್ತ ಸಂಗ್ರಹವಾಗಿದ್ದು, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿರುವುದನ್ನು ಸಚಿವ ಸತೀಶ್ ಜಾರಕಿಹೊಳಿ ಶ್ಲಾಘಿಸಿದರು. ಕಾರ್ಯಕ್ರಮ ಯಶಸ್ವಿಗೊಳಿಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಸಿಬ್ಬಂದಿಯನ್ನು ಅಭಿನಂದಿಸಿದರು.ಬೆಳಗಾವಿ ನಗರಕ್ಕೆ ರಕಸಕೊಪ್ಪ ಹಾಗೂ ಹಿಡಕಲ್ ಜಲಾಶಯಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಎಲ್‌&ಟಿ ಸಂಸ್ಥೆಯ 24x7 ಕುಡಿಯುವ ನೀರು ಪೂರೈಕೆ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. ಸದ್ಯ ನಗರದಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ನಿಪ್ಪಾಣಿ ಹಾಗೂ ಅಥಣಿ ಭಾಗದ ಗ್ರಾಮಗಳನ್ನು ಗುರುತಿಸಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಲುವೆಗೆ ನೀರು ಹರಿಸಿ, ಸಮರ್ಪಕ ವಿದ್ಯುತ್ ಪೂರೈಸಲು ಆಗ್ರಹ
ಅಗ್ನಿ ದುರಂತ: ಗಾಯಗೊಂಡಿದ್ದ ಮತ್ತಿಬ್ಬರ ಸಾವು