ಮಹಿಳೆಯರು ಮತ್ತು ಮಕ್ಕಳು ಸಂತ್ರಸ್ತರಾಗಿರುವ ಪ್ರಕರಣಗಳ ಬಗ್ಗೆ ಪೊಲೀಸರು ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.
ಮಂಗಳೂರು ; ಮಹಿಳೆಯರು ಮತ್ತು ಮಕ್ಕಳು ಸಂತ್ರಸ್ತರಾಗಿರುವ ಪ್ರಕರಣಗಳ ಬಗ್ಗೆ ಪೊಲೀಸರು ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ತೊಂದರೆಗೀಡಾದ ಪ್ರಕರಣಗಳ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ಅಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಠಾಣೆಯಲ್ಲಿ ಇಂತಹ ಪ್ರಕರಣಗಳು ಬಂದಾಗ ಸಂಬಂಧಿಸಿದ ಇಲಾಖೆ ಮಾಹಿತಿ ನೀಡುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026ರ ಏಪ್ರಿಲ್‍ನಿಂದ ಸೆಪ್ಟೆಂಬರ್‌ವರೆಗೆ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಕುರಿತು 155 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 52 ಮಹಿಳೆಯರ ಮೇಲೆ ದೌರ್ಜನ್ಯ, 10 ಅತ್ಯಾಚಾರ ಪ್ರಕರಣ, 79 ಪೋಕ್ಸೋ ಪ್ರಕರಣಗಳು, ಒಂದು ಬಾಲ್ಯವಿವಾಹ ಪ್ರಕರಣ ದಾಖಲಾಗಿದೆ. ಇದಲ್ಲದೇ 39 ಮಕ್ಕಳ ನಾಪತ್ತೆ ಪ್ರಕರಣಗಳು, 86 ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿದೆ. ಈ ಪೈಕಿ ಬಹುತೇಕರನ್ನು ಪತ್ತೆ ಹಚ್ಚಲಾಗಿದೆ. ವರದಕ್ಷಿಣೆ ಕಿರುಕುಳದ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 10 ಪ್ರಕರಣಗಳು ತನಿಖೆ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಮಹಿಳೆಯರ ಸಹಾಯವಾಣಿ 181 ಸಂಖ್ಯೆಯ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಸಂತ್ರಸ್ತರು ಈ ಸಂಖ್ಯೆಗೆ ಕರೆ ಮಾಡಿದಾಗ, ತಕ್ಷಣವೇ ಅವರಿಗೆ ಅಗತ್ಯ ನೆರವು ದೊರಕಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಲ್ಲಿ ಮೊದಲನೇ ಬಾರಿಗೆ ಗರ್ಭಿಣಿಯಾದವರಿಗೆ 5 ಸಾವಿರ ರು. ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ 4,438 ಫಲಾನುಭವಿಗಳು ದಾಖಲಿಸಿ ಗುರಿ ಮೀರಿದ ಸಾಧನೆ ಮಾಡಲಾಗಿದೆ. ಎರಡನೇ ಬಾರಿ ಗರ್ಭಿಣಿಯಾಗಿ ಹೆಣ್ಣು ಮಗುವಾದಲ್ಲಿ 6 ಸಾವಿರ ರು. ನೀಡಲಾಗುತ್ತಿದೆ. ಈ ಯೋಜನೆಯಡಿ 1,406 ಫಲಾನುಭವಿಗಳು ದಾಖಲಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಮಾಹಿತಿ ನೀಡಿದರು.
ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಜಿಲ್ಲೆಯಲ್ಲಿ 73 ಪ್ರಕರಣ ದಾಖಲಾಗಿದ್ದು, ಈ ಪೈಕಿ 30 ಪ್ರಕರಣಗಳು ಇತ್ಯರ್ಥಗೊಂಡಿದ್ದು, 31 ಸಮಾಲೋಚನಾ ಹಂತದಲ್ಲಿದೆ. ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಮಹಿಳೆ ಮತ್ತು ಮಕ್ಕಳ ಸಂತ್ರಸ್ತರಿಗೆ ನೆರವು ನೀಡಲಾಗುತ್ತಿದ್ದು, 24 ಮಂದಿಗೆ ಪೊಲೀಸ್ ನೆರವು, 59 ವೈದ್ಯಕೀಯ ನೆರವು, 11 ಮಂದಿಗೆ ತಾತ್ಕಾಲಿಕ ವಸತಿ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು 10 ಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಖಾಸಗಿ, ಸರ್ಕಾರಿ ಕಚೇರಿ, ಉದ್ಯಮ ಕೈಗಾರಿಕೆಗಳಲ್ಲಿ ಆಂತರಿಕ ದೂರು ಸಮಿತಿ ಕಡ್ಡಾಯವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 1,823 ಸಮಿತಿ ರಚನೆಯಾಗಿದೆ. ಬಾಕಿ ಇರುವ ಕಾರ್ಖಾನೆ ಕೈಗಾರಿಕೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಕಾರ್ಮಿಕ ಇಲಾಖೆ, ಬಾಯ್ಲರ್, ಕೈಗಾರಿಕೆ ಇಲಾಖೆಗಳಿಗೆ ಸೂಚಿಸಿದರು.
ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಶುಪಾಲನಾ ಕೇಂದ್ರ ತೆರೆಯಲು ಅನುಮೋದನೆ ದೊರೆತಿರುತ್ತದೆ ಎಂದು ತಿಳಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.