ಅಂಗನವಾಡಿ ಸಿಬ್ಬಂದಿಗೆ ಉದ್ಯೋಗ ಭದ್ರತೆ ನೀಡಲು ಆಗ್ರಹ

KannadaprabhaNewsNetwork | Published : Dec 18, 2024 12:46 AM

ಸಾರಾಂಶ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಅಹೋರಾತ್ರಿ ಧರಣಿ ಮಂಗಳವಾರ ಆರಂಭಗೊಂಡಿತು.

ಬಳ್ಳಾರಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆಯನ್ನು ಕಾಯಂಗೊಳಿಸಬೇಕು ಹಾಗೂ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿರುವ ಎರಡು ದಿನಗಳ ಅಹೋರಾತ್ರಿ ಧರಣಿ ಮಂಗಳವಾರ ಆರಂಭಗೊಂಡಿತು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹತ್ತಾರು ವರ್ಷಗಳಿಂದ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉದ್ಯೋಗ ಭದ್ರತೆಯಿಲ್ಲದೆ ದುಡಿಯುವಂತಾಗಿದೆ. ಗುಜರಾತ್ ಹೈಕೋರ್ಟ್ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಕಾಯಂಗೊಳಿಸಬೇಕು ಎಂದು ಹೇಳಿದೆ. ಆದರೆ, ಈ ವರೆಗೆ ಯಾವುದೇ ಕ್ರಮಗಳಾಗಿಲ್ಲ. ಗೌರವಧನ ಹೆಚ್ಚಳದ ಬಗ್ಗೆಯೂ ರಾಜ್ಯ ಸರ್ಕಾರ ಕಾಳಜಿ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳನ್ನಾಗಿ ಪರಿವರ್ತಿಸಲು ತೀರ್ಮಾನಿಸಿದೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ. ಆದರೆ, ಇದಕ್ಕೆ ಬೇಕಾದಂತಹ ಹಣಕಾಸನ್ನು ಬಿಡುಗಡೆಗೊಳಿಸಿ ಇದರ ಮೇಲ್ವಿಚಾರಣೆಗೆ ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಮಾಡಿದರೆ ಮಾತ್ರವೇ ಈ ತೀರ್ಮಾನಗಳನ್ನು ಪುಷ್ಟೀಕರಿಸಿದಂತಾಗುತ್ತದೆ ಎಂದು ತಿಳಿಸಿದರು.

ಧರಣಿ ಆರಂಭಿಸುವ ಮುನ್ನ ಸಂಘದ ಸದಸ್ಯರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬೀದಿಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹಿತ ಕಾಯಲು ಮುಂದಾಗಬೇಕು ಎಂದು ಘೋಷಣೆಗಳನ್ನು ಕೂಗಿದರು.

ಸಿಐಟಿಯು ಮುಖಂಡ ಜೆ. ಸತ್ಯಬಾಬು, ಸಂಘದ ಜಿಲ್ಲಾ ಪ್ರಮುಖರಾದ ಕೆ. ಭಾಗ್ಯಾ, ಅನ್ನಪೂರ್ಣಾ, ಮಂಗಳಗೌರಿ, ವಿಶಾಲಾಕ್ಷಿ, ರಾಜಲಕ್ಷ್ಮಿ, ಗೋವಿಂದಮ್ಮ, ಹುಸೇನಮ್ಮ, ಮಾಳಮ್ಮ, ರಾಜಮ್ಮ, ವೀಣಾಕುಮಾರಿ ಹಾಗೂ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this article