ಗ್ರಾಮೀಣರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸಿ

KannadaprabhaNewsNetwork |  
Published : Aug 09, 2026, 02:15 AM IST
ಹಾವೇರಿ ತಾಲೂಕಿನ ಹೊಂಬರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಬರಡಿ ಗ್ರಾಮದಲ್ಲಿ ನಡೆಯುತ್ತಿರುವ ನೀರಿನ ಕಾಲುವೆ ನಿರ್ಮಾಣ ಕಾಮಗಾರಿಯನ್ನು ತಾಪಂ ಇಒ ಡಾ. ಪರಮೇಶ ಎನ್. ಹುಬ್ಬಳ್ಳಿ ವೀಕ್ಷಿಸಿ ಅವರು ಮಾತನಾಡಿದರು. | Kannada Prabha

ಸಾರಾಂಶ

ಬರಗಾಲದ ಮುನ್ಸೂಚನೆ ಹಿನ್ನೆಲೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಅವರಿಗೆ ಅಗತ್ಯವಿರುವ ಕೂಲಿ ಕೆಲಸ ಒದಗಿಸುವ ಜವಾಬ್ದಾರಿ ಗ್ರಾಮ ಪಂಚಾಯಿತಿಗಳ ಮೇಲಿದೆ ಎಂದು ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಡಾ. ಪರಮೇಶ ಎನ್. ಹುಬ್ಬಳ್ಳಿ ಹೇಳಿದರು.

ಹಾವೇರಿ:ಬರಗಾಲದ ಮುನ್ಸೂಚನೆ ಹಿನ್ನೆಲೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಅವರಿಗೆ ಅಗತ್ಯವಿರುವ ಕೂಲಿ ಕೆಲಸ ಒದಗಿಸುವ ಜವಾಬ್ದಾರಿ ಗ್ರಾಮ ಪಂಚಾಯಿತಿಗಳ ಮೇಲಿದೆ ಎಂದು ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಡಾ. ಪರಮೇಶ ಎನ್. ಹುಬ್ಬಳ್ಳಿ ಹೇಳಿದರು.

ತಾಲೂಕಿನ ಹೊಂಬರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಬರಡಿ ಗ್ರಾಮದಲ್ಲಿ ನಡೆಯುತ್ತಿರುವ ನೀರಿನ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಜು.1ರಿಂದ ಜಾರಿಗೆ ತಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಮತ್ತು ಜೀವನೋಪಾಯ ಅಭಿಯಾನ (ವಿಬಿ-ಜಿ ರಾಮ್ ಜಿ) ಯೋಜನೆಯ ಉದ್ದೇಶವನ್ನು ಗ್ರಾಮೀಣ ಪ್ರದೇಶದ ಪ್ರತಿಯೊಂದು ಕುಟುಂಬಕ್ಕೂ ತಲುಪಿಸಬೇಕು. ಈ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ ಉದ್ಯೋಗ ಖಾತ್ರಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸುವ ಮೂಲಕ ಆರ್ಥಿಕ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದರು.

ಯೋಜನೆಯ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗ್ರಾಮಗಳ ವಿವಿಧ ಓಣಿಗಳಲ್ಲಿ ವಿಬಿ-ಜಿ ರಾಮ್ ಜಿ ಜಾಗೃತಿ ಜಾಥಾ ಹಾಗೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮೀಣರು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ಥಳೀಯವಾಗಿಯೇ ಉದ್ಯೋಗ ಪಡೆಯಬೇಕು ಎಂದು ತಿಳಿಸಿದರು.

ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದರ ಜತೆಗೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಕೇವಲ ಕೂಲಿ ನೀಡುವುದಕ್ಕೆ ಸೀಮಿತವಾಗದೆ ಜಲ ಭದ್ರತೆ, ಗ್ರಾಮೀಣ ರಸ್ತೆಗಳು, ಕೃಷಿ ಹಾಗೂ ಜೀವನೋಪಾಯಕ್ಕೆ ಅಗತ್ಯವಾದ ಗೋದಾಮು ಸೇರಿದಂತೆ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ವಿಬಿ-ಜಿ ರಾಮ್ ಜಿ ಯೋಜನೆಯು ಕೇಂದ್ರ ಪುರಸ್ಕೃತ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಯೋಜನಾ ವೆಚ್ಚವನ್ನು 60:40ರ ಅನುಪಾತದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳನ್ನು ಗುರುತಿಸಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹೊಂಬರಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಬಾನಾ ನದಾಫ್, ತಾಲೂಕು ಪಂಚಾಯಿತಿ ಐಇಸಿ ಸಂಯೋಜಕ ಗಿರೀಶ ಬೆನ್ನೂರ, ತಾಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಮಹಾಗುಂಡೇಶ್ವರ ಮುಗುಳಿ, ಕಾಯಕ ಮಿತ್ರರು, ಕೂಲಿ ಕಾರ್ಮಿಕರು, ಮೇಟಿಗಳು ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾನಪದ ವಸ್ತು ಸಂಗ್ರಹಾಲಯ ಈ ನೆಲದ ಜೀವನ ಮೀಮಾಂಸೆ ಹೇಳುವ ಪಠ್ಯ
ಹಡಪದ ಅಪ್ಪಣ್ಣನವರು ಬಸವಣ್ಣನವರ ಬಲಗೈ ಬಂಟರಾಗಿದ್ದರು-ಸ್ವಾಮೀಜಿ