ಕಾವೇರಿ ಆರತಿ ಜನರಿಗೆ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಕಲ್ಪಿಸಿ: ರಮೇಶ ಬಂಡಿಸಿದ್ದೇಗೌಡ

KannadaprabhaNewsNetwork |  
Published : Oct 10, 2026, 01:45 AM IST
9ಕೆಎಂಎನ್ ಡಿ14 | Kannada Prabha

ಸಾರಾಂಶ

ಆರತಿ ನಡೆಯುವ ಸ್ಥಳದಲ್ಲಿ ಅಗತ್ಯ ಪ್ರಮಾಣದ ನೀರು ತುಂಬಿಸಿ ಸ್ಥಳದ ಸೌಂದರ್ಯ ಹೆಚ್ಚಿಸುವುದರೊಂದಿಗೆ ಕಾರ್ಯಕ್ರಮದ ವೈಭವಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕಾವೇರಿ ಆರತಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಕೆಆರ್‌ಎಸ್ ನಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಕಾರ್ಯಕ್ರಮವನ್ನು ವೈಭವಯುತ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವ ನಿಟ್ಟಿನಲ್ಲಿ ಬಾಕಿ ಉಳಿದಿರುವ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಆರತಿ ನಡೆಯುವ ಸ್ಥಳದಲ್ಲಿ ಅಗತ್ಯ ಪ್ರಮಾಣದ ನೀರು ತುಂಬಿಸಿ ಸ್ಥಳದ ಸೌಂದರ್ಯ ಹೆಚ್ಚಿಸುವುದರೊಂದಿಗೆ ಕಾರ್ಯಕ್ರಮದ ವೈಭವಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ನಿರ್ದೇಶನ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಗಣ್ಯರಿಗಾಗಿ ಕ್ಯಾರವನ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಸಾರ್ವಜನಿಕರಿಗೆ ಸಮರ್ಪಕ ಆಸನ ವ್ಯವಸ್ಥೆ ಕಲ್ಪಿಸುವ ಜೊತೆಗೆ, ಪಾರ್ಕಿಂಗ್ ಸ್ಥಳಗಳ ಸಮೀಪದಲ್ಲಿಯೂ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮಕ್ಕೆ ಬರುವ ಜನರಿಗೆ 300 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳ ಸುಗಮ ಸಂಚಾರ ಹಾಗೂ ನಿಲುಗಡೆಗೆ ಸೂಕ್ತ ಯೋಜನೆ ರೂಪಿಸಬೇಕು. ಕಾರ್ಯಕ್ರಮದ ಮೊದಲ ದಿನದಿಂದಲೇ ಎರಡು ತಾತ್ಕಾಲಿಕ ಬಸ್ ನಿಲ್ದಾಣಗಳನ್ನು ಕಾರ್ಯಾರಂಭಗೊಳಿಸಿ ಅಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ಪದವಿ ಕಾಲೇಜಿನ ಹಿಂಭಾಗ ಸೇರಿದಂತೆ ಗುರುತಿಸಿರುವ ಸ್ಥಳಗಳಲ್ಲಿ ಸಾರ್ವಜನಿಕ ವಾಹನಗಳು ಮತ್ತು ಬಸ್‌ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ವಾಹನ ದಟ್ಟಣೆ ಉಂಟಾಗದಂತೆ ಸಂಚಾರ ಮಾರ್ಗಗಳನ್ನು ವ್ಯವಸ್ಥಿತವಾಗಿ ರೂಪಿಸಿ, ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

ಪಾರ್ಕಿಂಗ್ ಪ್ರದೇಶಗಳು ಹಾಗೂ ಕಾರ್ಯಕ್ರಮದ ಸ್ಥಳದಲ್ಲಿ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸಲು ಧ್ವನಿವರ್ಧಕಗಳ ಮೂಲಕ ನಿರಂತರ ಪ್ರಕಟಣೆ ಮಾಡುವ ವ್ಯವಸ್ಥೆ ಕಲ್ಪಿಸಬೇಕು. ರಾತ್ರಿ ವೇಳೆಯಲ್ಲಿಯೂ ಕಾರ್ಯಕ್ರಮದ ಸ್ಥಳ ಹಾಗೂ ಪಾರ್ಕಿಂಗ್ ಪ್ರದೇಶಗಳು ಸ್ಪಷ್ಟವಾಗಿ ಗೋಚರಿಸುವಂತೆ ಫೋಕಸ್ ಲೈಟ್‌ಗಳನ್ನು ಅಳವಡಿಸಬೇಕು ಎಂದು ಹೇಳಿದರು.

ವಿದ್ಯುತ್ ವ್ಯತ್ಯಯವಾಗದಂತೆ ಪರ್ಯಾಯ ಜನರೇಟರ್ ವ್ಯವಸ್ಥೆ ಮಾಡಬೇಕು. ಜನಸಂದಣಿಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಅಗತ್ಯ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಡಾ.ಶೋಭರಾಣಿ, ಜಿಪಂ ಸಿಇಒ ಕೆ.ಆರ್.ನಂದಿನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಘಾಟನೆಗೆ ಮುನ್ನವೇ ಕಟ್ಟಡ ಬಿರುಕು
ಬಸರವಳ್ಳಿ ಪಂಚಾಯಿತಿ ಹಸಲರ ವಾರ್ಡಿಗೆ ಬೇಕಿದೆ ಸಂಪರ್ಕ ಸೇತುವೆ