ನಿಗದಿತ ಅವಧಿಯಲ್ಲಿ ಅಗತ್ಯ ಸೌಲಭ್ಯ ಒದಗಿಸಿ

KannadaprabhaNewsNetwork |  
Published : Jul 30, 2026, 03:15 AM IST
ಸುವರ್ಣವಿಧಾನಸೌಧದಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು | Kannada Prabha

ಸಾರಾಂಶ

ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಸುಧಾರಿಸಬೇಕು. ಅಗತ್ಯವಿರುವ ಪ್ರದೇಶಗಳಲ್ಲಿ ಹೊಸ ಶೌಚಾಲಯಗಳನ್ನು ನಿರ್ಮಿಸಬೇಕು. ಮನೆಮನೆಗೆ ತ್ಯಾಜ್ಯ ಸಂಗ್ರಹ ಮತ್ತು ಘನ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿ, ವೈಜ್ಞಾನಿಕ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಸುಧಾರಿಸಬೇಕು. ಅಗತ್ಯವಿರುವ ಪ್ರದೇಶಗಳಲ್ಲಿ ಹೊಸ ಶೌಚಾಲಯಗಳನ್ನು ನಿರ್ಮಿಸಬೇಕು. ಮನೆಮನೆಗೆ ತ್ಯಾಜ್ಯ ಸಂಗ್ರಹ ಮತ್ತು ಘನ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿ, ವೈಜ್ಞಾನಿಕ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸುವರ್ಣ ವಿಧಾನಸೌಧದ ವಿಡಿಯೋ ಸಂವಾದ ಸಭಾಂಗಣದಲ್ಲಿ ಮಂಗಳವಾರ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು. ಅಪೂರ್ಣ ಕಾಮಗಾರಿಗಳನ್ನು ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ನಗರದಲ್ಲಿ ಇಂದಿರಾ ಕ್ಯಾಂಟೀನ್ 2.0 ಯೋಜನೆಯಡಿ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಬಡವರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ನಗರ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯನ್ನು ಮಹಾನಗರ ಪಾಲಿಕೆಯೇ ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಸ್ವಚ್ಛತೆ, ಆಹಾರದ ಗುಣಮಟ್ಟ ಹಾಗೂ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ನಿಗಾ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಖಾತಾ ವ್ಯವಸ್ಥೆಯಲ್ಲಿ ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಪರಿಹರಿಸಬೇಕು. ಸಾರ್ವಜನಿಕರಿಗೆ ವಿಳಂಬವಿಲ್ಲದೆ ಇ-ಖಾತಾ ಸೇವೆ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.ನಗರದಲ್ಲಿ ಎಲ್‌ ಆ್ಯಂಡ್‌ ಟಿ ಸಂಸ್ಥೆ ಕುಡಿಯುವ ನೀರಿನ ಕೊಳವೆ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು, ದುರಸ್ತಿ ಮಾಡದೆ ಬಿಟ್ಟಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಇಂತಹ ರಸ್ತೆಗಳನ್ನು ತಕ್ಷಣ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸೂಚಿಸಿದರು.ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ರಸ್ತೆ, ಚರಂಡಿ, ಪಾದಚಾರಿ ಮಾರ್ಗ ಹಾಗೂ ಇತರೆ ಮೂಲಸೌಲಭ್ಯ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ನೀಡಬೇಕು. ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿರುವ ಬಡಾವಣೆಗಳಲ್ಲಿ ಲಭ್ಯವಿರುವ ಮೂಲೆ ಹಾಗೂ ಬಿಡಿ ನಿವೇಶನಗಳನ್ನು ನಿಯಮಾನುಸಾರ ಹಂಚಿಕೆ ಮಾಡಬೇಕು. ಪ್ರಾಧಿಕಾರದ ಕಚೇರಿಯಲ್ಲಿನ ಕಡತಗಳನ್ನು ಕಡ್ಡಾಯವಾಗಿ ಇ-ಆಫೀಸ್ ತಂತ್ರಾಂಶದ ಮೂಲಕವೇ ನಿರ್ವಹಿಸಬೇಕು ಎಂದು ಸೂಚಿಸಿದರು.ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮುಂದಿನ ಹತ್ತು ವರ್ಷಗಳ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರು ಪೂರೈಕೆಗೆ ಸಮಗ್ರ ಕ್ರಿಯಾಯೋಜನೆ ರೂಪಿಸಬೇಕು. ನಗರದಲ್ಲಿನ ಒಳಚರಂಡಿ ವ್ಯವಸ್ಥೆಯನ್ನೂ ಸುಧಾರಿಸಿ, ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಯೋಜನೆಗಳನ್ನು ಸಿದ್ಧಪಡಿಸಬೇಕು ಎಂದು ಸೂಚಿಸಿದರು.ಶಾಸಕ ಅಭಯ ಪಾಟೀಲ ಅಸಮಾಧಾನ:

ಶಾಸಕ ಅಭಯ ಪಾಟೀಲ ಮಾತನಾಡಿ, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಹಲವು ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಆದರೆ ಪ್ರಗತಿ ವರದಿಯಲ್ಲಿ ಅವು ಪೂರ್ಣಗೊಂಡಿವೆ ಎಂದು ದಾಖಲಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸ್ಥಳೀಯ ಶಾಸಕರ ಗಮನಕ್ಕೆ ತರದೆ ಅಧಿಕಾರಿಗಳು ಏಕಪಕ್ಷೀಯವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ. ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ, ಗುಣಮಟ್ಟದಿಂದ ಮತ್ತು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.ನಗರದ ವಿವಿಧ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಅಗೆದು, ಕಾಮಗಾರಿ ಪೂರ್ಣಗೊಂಡ ನಂತರವೂ ದುರಸ್ತಿ ಮಾಡದಿರುವುದು ಸಾರ್ವಜನಿಕರಿಗೆ ತೊಂದರೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡ ಗ್ರಾಮೀಣ ಸೊಗಡು ಯೋಜನೆಯೂ ಪೂರ್ಣಗೊಂಡಿಲ್ಲ ಎಂದು ಸಭೆಯ ಗಮನಕ್ಕೆ ತಂದರು.ಸಭೆಯಲ್ಲಿ ಶಾಸಕ ಆಸಿಫ್ ರಾಜು ಸೇಠ್, ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹನುಮಂತ ಕೊಂಗಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಹಾನಗರ ಪಾಲಿಕೆ ಆಯುಕ್ತ ಎಂ.ಕಾರ್ತಿಕ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಕವಿತಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಸಿದ್ದು ಹುಲ್ಲೊಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಆರೋಗ್ಯ ಯೋಜನೆಗಳಡಿ ಅರ್ಹ ಬಿಪಿಎಲ್ ಕುಟುಂಬಗಳಿಗೆ ನಗದು ರಹಿತ ಐವಿಎಫ್ ಸೇವೆ ಆರಂಭಿಸಿದ ‘ಮಿಲನ್’
ಸಂಧಾನ ಸಭೆ ಯಶಸ್ಸು; ಯಾರನ್ನು ಮಂತ್ರಿ ಮಾಡಿದರೂ ಓಕೆ ಎಂದಿರುವ ಬೆಳಗಾವಿ ಶಾಸಕರು