ವಿದ್ಯಾರ್ಥಿ ನಿಲಯ ಸೇರಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ

KannadaprabhaNewsNetwork |  
Published : Nov 28, 2026, 12:30 AM IST
ವಿದ್ಯಾರ್ಥಿ ನಿಲಯ, ರಸ್ತೆ, ಆಟದ ಮೈದಾನಕ್ಕೆ ಆಗ್ರಹ ತಾಲೂಕು ಕಚೇರಿ ಎದುರು 120ಕ್ಕೂ ಹೆಚ್ಚು ವಿದ್ಯಾರ್ಥಿಗಳ ಧರಣಿ | Kannada Prabha

ಸಾರಾಂಶ

ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಆಸರೆಯಾಗಬೇಕಾದರೆ, ಅಲ್ಲಿ ಅಗತ್ಯ ಮೂಲಸೌಕರ್ಯಗಳಿರುವುದು ಅತ್ಯವಶ್ಯಕ. ಆದರೆ ಅರಸೀಕೆರೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭವಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಕಳೆದಿದ್ದರೂ ವಿದ್ಯಾರ್ಥಿಗಳಿಗೆ ಅಗತ್ಯವಾದ ವಸತಿ, ರಸ್ತೆ, ಗ್ರಂಥಾಲಯ ಹಾಗೂ ಕ್ರೀಡಾ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಆಸರೆಯಾಗಬೇಕಾದರೆ, ಅಲ್ಲಿ ಅಗತ್ಯ ಮೂಲಸೌಕರ್ಯಗಳಿರುವುದು ಅತ್ಯವಶ್ಯಕ. ಆದರೆ ಅರಸೀಕೆರೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭವಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಕಳೆದಿದ್ದರೂ ವಿದ್ಯಾರ್ಥಿಗಳಿಗೆ ಅಗತ್ಯವಾದ ವಸತಿ, ರಸ್ತೆ, ಗ್ರಂಥಾಲಯ ಹಾಗೂ ಕ್ರೀಡಾ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಪಿ.ಪಿ. ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿಗೆ ತೆರಳಿದರು. ಬಳಿಕ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಚೈತ್ರ ಮಾತನಾಡಿ, ಅರಸೀಕೆರೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆರಂಭವಾಗಿ ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿದ್ದಾರೆ. ಹಾಸನ ಜಿಲ್ಲೆ ಮಾತ್ರವಲ್ಲದೆ ವಿವಿಧ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯಲು ಬರುತ್ತಿದ್ದಾರೆ. ಆದರೆ ಕಾಲೇಜಿನಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕಾಲೇಜಿನ ಮುಂಭಾಗದಲ್ಲಿಯೇ ವಿದ್ಯಾರ್ಥಿ ನಿಲಯದ ಕಟ್ಟಡವಿದ್ದರೂ ಇದುವರೆಗೂ ಆರಂಭಿಸಿಲ್ಲ. ಇದರಿಂದ ದೂರದ ಊರುಗಳಿಂದ ಬಂದಿರುವ ವಿದ್ಯಾರ್ಥಿಗಳು ವಸತಿ ವ್ಯವಸ್ಥೆಗಾಗಿ ಪರದಾಡುವಂತಾಗಿದೆ. ನಗರದಲ್ಲಿರುವ ಪ್ರಸ್ತುತ ವಿದ್ಯಾರ್ಥಿ ನಿಲಯಗಳು ಕಾಲೇಜಿನ ವಿದ್ಯಾರ್ಥಿಗಳ ಅಗತ್ಯಕ್ಕೆ ತಕ್ಕಂತೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಮರ್ಪಕವಾಗಿಲ್ಲ. ಬಾಲಕ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ ನಿಲಯದ ಕಟ್ಟಡವಿಲ್ಲದೆ, ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಾದ ಆಟದ ಮೈದಾನವೂ ಇಲ್ಲವಾಗಿದೆ ಎಂದು ತಿಳಿಸಿದರು.ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಈಗಾಗಲೇ ಕಾಲೇಜಿನ ಪ್ರಾಂಶುಪಾಲರ ಮೂಲಕ ಸಂಬಂಧಪಟ್ಟ ಉನ್ನತ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಸಮರ್ಪಕ ಕ್ರಮ ಕೈಗೊಂಡಿಲ್ಲ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಯ ಉದ್ದೇಶ ಕೇವಲ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸುವುದಕ್ಕೆ ಸೀಮಿತವಾಗಬಾರದು. ಅಗತ್ಯ ಸೌಲಭ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಒತ್ತಾಯಿಸಿದರು.ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿದ ಎಂ. ಜಿ. ಸಂತೋಷ್ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಕಾಲೇಜಿನ ಮುಂಭಾಗದಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಇನ್ನು 15 ದಿನಗಳೊಳಗಾಗಿ ಆರಂಭಿಸಲಾಗುವುದು ಎಂದು ತಿಳಿಸಿದರು.ಪ್ರತಿಭಟನೆಯಲ್ಲಿ AIDSO ಉಪಾಧ್ಯಕ್ಷ ಅಭಿಷೇಕ್, ಕಾಲೇಜಿನ ವಿದ್ಯಾರ್ಥಿಗಳಾದ ಮೇಘನಾ, ಭಾವನಾ, ಪ್ರಸಾದ್, ಮಂಜುನಾಥ್, ಅದ್ರಿಜಾ, ಭೂಮಿಕಾ, ನಿರೀಕ್ಷ, ಅನಿಲ್ ಕುಮಾರ್, ಜೀವನ್ ದಾಸ್, ಸ್ಫೂರ್ತಿ ಸೇರಿದಂತೆ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಯಂ ರಕ್ಷಣೆಗೆ ಕರಾಟೆ ಅತ್ಯವಶ್ಯ: ಶಾಸಕ ದಿನಕರ ಶೆಟ್ಟಿ
ಕನಕದಾಸರ ಮಾನವೀಯ ಮೌಲ್ಯ ಪ್ರಸ್ತುತ