
ಕೊಪ್ಪಳ: ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಚಟುವಟಿಕೆ ಆಧಾರಿತ ಶಾಲಾ ಪೂರ್ವ ಶಿಕ್ಷಣವನ್ನು ನಿಗದಿತ ಸಮಯದಲ್ಲಿ ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಅಮರೇಶ್ ಹಾವಿನ್ ಸೂಚಿಸಿದರು.
ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ಕಡ್ಡಾಯವಾಗಿ ಶಾಲಾ ಪೂರ್ವ ಶಿಕ್ಷಣ ನೀಡಬೇಕು. ಎಲ್‌ಕೆಜಿ ಮತ್ತು ಯುಕೆಜಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಅಂಗನವಾಡಿ ವ್ಯಾಪ್ತಿಯ ಎಲ್ಲ ಮಕ್ಕಳು ನಿಯಮಿತವಾಗಿ ಕೇಂದ್ರಗಳಿಗೆ ಬರುವಂತೆ ಕ್ರಮವಹಿಸಿ, ಶೇ.100ರಷ್ಟು ಹಾಜರಾತಿ ಸಾಧಿಸಲು ಕಾರ್ಯತಂತ್ರ ರೂಪಿಸಬೇಕು ಎಂದು ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ಚಟುವಟಿಕೆ ಹಾಗೂ ಮಕ್ಕಳ ಕಲಿಕಾ ಪ್ರಗತಿ ಕುರಿತು ಪೋಷಕರಿಗೆ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ನಿಯಮಿತವಾಗಿ ಪೋಷಕರ ಸಭೆಗಳನ್ನು ಆಯೋಜಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಕಾರ್ಯಗಳಲ್ಲಿ ಪೋಷಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಾಗಾರದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸುವುದು ಹಾಗೂ ''ಪೋಷಕರ ನಡೆ ಅಂಗನವಾಡಿಯ ಕಡೆ'' ಕಾರ್ಯಕ್ರಮದಡಿ ಪೋಷಕರ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಕುರಿತು ಕಾರ್ಯಕರ್ತೆಯರಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಯಿತು.