ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಪರಿಹಾರ ಧನ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಪರಿಹಾರ ಧನ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಮಳೆ ಹಾನಿ ಕುರಿತು ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ಅವರು ಸಭೆ ನಡೆಸಿದರು.
ಮಳೆ ಹಾನಿ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಈ ಬಾರಿ ಇದುವರೆಗೆ ವಾಡಿಕೆಗಿಂತ ಜಾಸ್ತಿ ಮಳೆಯಾಗಿದೆ. ಜಿಲ್ಲೆಯಲ್ಲಿ 82 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 705 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಎಲ್ಲ ಪ್ರಕರಣಗಳಲ್ಲಿ ಪರಿಹಾರ ಪಾವತಿ ಆಗಿದೆ. ಆದರೆ ಪುತ್ತೂರಿನಲ್ಲಿ 25 ಮನೆಗಳಿಗೆ ಪರಿಹಾರ ಪಾವತಿ ಬಾಕಿ ಇದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಎಲ್ಲ ಹಾನಿ ಪ್ರಕರಣಗಳಲ್ಲಿ ವಿಳಂಬ ಮಾಡದೆ ಸಂತ್ರಸ್ತರಿಗೆ ಪರಿಹಾರ ಪಾವತಿ ಮಾಡಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ ಎನ್‌ಡಿಆರ್‌ಎಫ್ ನಿಧಿಯಿಂದ 1.20 ಲಕ್ಷ ರುಪಾಯಿ ಪರಿಹಾರ ಪಾವತಿ ಮಾಡಲಾಗುತ್ತದೆ. ಅಂಥವರಿಗೆ ಹೊಸ ಮನೆ ಕಟ್ಟಲು ರಾಜೀವ್ ಗಾಂಧಿ ವಸತಿ ಯೋಜನೆ ಸೇರಿದಂತೆ ಒಟ್ಟಾರೆಯಾಗಿ 2.70 ಲಕ್ಷ ರುಪಾಯಿ ಅನುದಾನ ದೊರೆಯುತ್ತದೆ. ಮನೆ ಕಳೆದುಕೊಂಡ ಸಂತ್ರಸ್ತರನ್ನು ರಾಜೀವ್ ಗಾಂಧಿ ವಸತಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಪ್ರಕ್ರಿಯೆ ನಡೆಸುವಂತೆ ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ಇದುವರೆಗೆ 2.43 ಹೆಕ್ಟೇರ್ ಕೃಷಿ ಭೂಮಿ, 4.88 ಹೆ. ತೋಟಗಾರಿಕೆ ಬೆಳೆ ಹಾನಿ ಸಂಭವಿಸಿದೆ. ತೋಟಗಾರಿಕೆ ಬೆಳೆ ಹಾನಿಯಲ್ಲಿ 1.36 ಲಕ್ಷ ರು. ಪರಿಹಾರ ಪಾವತಿಸಲಾಗಿದೆ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಜೂ.1ರಿಂದ 17ರವರೆಗೆ 4324 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದರೆ, 216.20 ಕಿಲೋ ಮೀಟರ್ ಲೈನ್‌ಗೆ ತೊಂದರೆಯಾಗಿದೆ ಎಂದು ಮೆಸ್ಕಾಂ ಅಧಿಕಾರಿ ತಿಳಿಸಿದರು.
ಭೂಕುಸಿತ ತಡೆಗೆ 36 ಕಾಮಗಾರಿ:
ಮಲೆನಾಡು ಮತ್ತೆ ಕರಾವಳಿ ಪ್ರದೇಶದಲ್ಲಿ ಭೂಕುಸಿತ ತಡೆಗಟ್ಟಲು 100 ಕೋಟಿ ರುಪಾಯಿ ಬಜೆಟ್ ಅನುದಾನ ಮೀಸಲಿರಿಸಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27 ಕೋಟಿ ರು.ಗಳ 36 ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ಭೂಕುಸಿತ ಸಂಭಾವ್ಯ ಪ್ರದೇಶಗಳನ್ನು ಗುರುತಿಸಿ ಈ ಕಾಮಗಾರಿಗಳ ಪಟ್ಟಿ ತಯಾರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.
ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ವಾಹನ ಸಂಚಾರ ಮಾಡುವ ಕುರಿತು ತಜ್ಞರ ವರದಿಯನ್ನು ಆದಷ್ಟು ಬೇಗನೆ ಪಡೆದುಕೊಂಡು ಆ ವರದಿಯಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಡಾ.ಆನಂದ್, ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಡಾ.ಅರುಣ್ ಕೆ., ಡಿ ಆಂಟನಿ ಮರಿಯಪ್ಪ ಇದ್ದರು.
ಕೆತ್ತಿಕಲ್ ಭೂಕುಸಿತ ಪರಿಹಾರ
ವಾಮಂಜೂರು- ಗುರುಪುರ ನಡುವಿನ ರಾ.ಹೆದ್ದಾರಿಯ ಕೆತ್ತಿಕಲ್‌ನಲ್ಲಿ ಭಾರೀ ಭೂಕುಸಿತ ಕುರಿತು ಚರ್ಚೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಬದಿಯ ಧರೆಯನ್ನು 90 ಡಿಗ್ರಿಯಲ್ಲಿ ಕಡಿದಿದ್ದರಿಂದಲೇ ಭೂಕುಸಿತ ಉಂಟಾಗುತ್ತಿದೆ. ಈ ಪ್ರದೇಶದಲ್ಲಿ ಕಳೆದ ವರ್ಷ ಭೂಕುಸಿತ ತಡೆಗೆ ಪರಿಹಾರ ಕಾಮಗಾರಿ ನಡೆಸಲಾಗಿತ್ತು. ಧರೆಯನ್ನು ಅವೈಜ್ಞಾನಿಕವಾಗಿ ಕಡಿದಿದ್ದರಿಂದ ಪರಿಹಾರ ಕಾಮಗಾರಿ ನಡೆಸಿದ ಪ್ರದೇಶದಲ್ಲೇ ಕುಸಿತ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ, ಮುಂದಿನ ಪರಿಹಾರ ಕಾಮಗಾರಿ ನಡೆಸಬೇಕಾದರೆ ಭೂಸ್ವಾಧೀನ ಮಾಡಬೇಕಿದೆ ಎಂದರು. ಈ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.