ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸಿ

KannadaprabhaNewsNetwork |  
Published : Dec 05, 2023, 01:30 AM IST
ಹೊಸಪೇಟೆಯಲ್ಲಿ ಸೋಮವಾರ ವಿಜಯನಗರ ಜಿಲ್ಲಾಧಿಕಾರಿ ಕಚೇರಿಗೆ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮನವಿ ಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಕಳೆದ ಎರಡು ದಶಕಗಳಿಂದಲೂ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಇಲ್ಲ. ಇವರ ಕುಟುಂಬ ಪರಿಸ್ಥಿತಿಯೂ ಸರಿ ಇಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ. ಹಾಗಾಗಿ ಸರ್ಕಾರ ಸೇವಾ ಕಾಯಮಾತಿಗೆ ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು

ಕನ್ನಡಪ್ರಭ ವಾರ್ತೆ ಹೊಸಪೇಟೆ

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವಿಜಯನಗರ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿಪತ್ರ ಸಲ್ಲಿಸಿದರು.

ನಗರದ ಪುನೀತ್ ರಾಜ್‌ಕುಮಾರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ವಿವಿಧ ವೃತ್ತದಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಗುಜ್ಜಲ ಹುಲುಗಪ್ಪ ಮಾತನಾಡಿ, ಕಳೆದ ಎರಡು ದಶಕಗಳಿಂದಲೂ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಇಲ್ಲ. ಇವರ ಕುಟುಂಬ ಪರಿಸ್ಥಿತಿಯೂ ಸರಿ ಇಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ. ಹಾಗಾಗಿ ಸರ್ಕಾರ ಸೇವಾ ಕಾಯಮಾತಿಗೆ ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳು:

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು. ಈ ಮೂಲಕ ಸೇವಾ ಭದ್ರತೆ ಒದಗಿಸಬೇಕು. ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಈ ಹಿಂದೆ ೧೯೮೨, ೧೯೯೨ ಮತ್ತು ೧೯೯೬ ಮತ್ತು ೨೦೦೩ರಲ್ಲಿ ಕಾಯಂ ಮಾಡಿರುವ ನಿರ್ದೇಶನಗಳಿದ್ದು, ಕೂಡಲೇ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮವಹಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಿದ ಪ್ರಾಂಶುಪಾಲರನ್ನು ಮತ್ತು ಶಿಕ್ಷಕರನ್ನು ೨೦೦೯ರಲ್ಲಿ ಕಾಯಂ ಮಾಡಲಾಗಿದೆ. ಅದೇ ಮಾದರಿಯಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕೂಡ ಕಾಯಂಗೊಳಿಸಿ ಆದೇಶಿಸಬೇಕು. ರಾಜ್ಯ ಹೈಕೋರ್ಟ್ ಆದೇಶದ ಅನುಸಾರ ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಉಪನ್ಯಾಸಕರನ್ನು ಕಾಯಂಗೊಳಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯಲ್ಲಿ ಹಂಗಾಮಿ ನೌಕರರನ್ನು ವಿಲೀನಗೊಳಿಸಲು ೨೦೧೭ರ ಮಾರ್ಚ್‌ನಲ್ಲಿ ಸರ್ಕಾರ ರೂಪಿಸಿದ ಅಧಿಸೂಚನೆಯಂತೆ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ತೆಲಂಗಾಣ, ಹರ್ಯಾಣ, ಪಂಜಾಬ್, ಆಂಧ್ರಪ್ರದೇಶಗಳಲ್ಲಿ ಅತಿಥಿ ಉಪನ್ಯಾಸಕರ ವೇತನ ಕೂಡ ಹೆಚ್ಚಳ ಮಾಡಲಾಗಿದೆ. ಕನಿಷ್ಠ ವೇತನದಲ್ಲಿ ದುಡಿಯುತ್ತಿರುವ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಗೌರವಾಧ್ಯಕ್ಷ ಡಾ. ಟಿ. ದುರುಗಪ್ಪ, ಸಂಘದ ಪದಾಧಿಕಾರಿಗಳಾದ ಸಂಘದ ಅಕ್ಕಿ ಮಲ್ಲಿಕಾರ್ಜುನ, ಎಂ. ಶಿವಮೂರ್ತಿ, ಷಣ್ಮುಖಪ್ಪ, ಅಯ್ಯಾಳಿ ಯರಿಸ್ವಾಮಿ, ಶಿವಾನಂದ ಆಚಾರ್, ಶೇಖರಪ್ಪ, ಭೀಮಲಿಂಗಪ್ಪ, ಡಾ. ನಾಗವೇಣಿ, ಡಾ. ಗಿರಿಜಾ ಮತ್ತಿತರರಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ