ನೆಲಮಂಗಲ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನು 39 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಅತ್ಯಾಧುನಿಕ ಸೌಲಭ್ಯಗಳ ಜೊತೆಗೆ 100 ಹಾಸಿಗೆಗಳ ಸಾಮರ್ಥ್ಯದಲ್ಲಿ ರಾಜ್ಯದಲ್ಲಿಯೇ ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ನಿರ್ಮಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ರಾಜ್ಯದಲ್ಲಿ ಶೇ.80ರಷ್ಟು ಜನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೆ, ಅವರ ಗುಣಮಟ್ಟದ ಚಿಕಿತ್ಸೆ, ಔಷಧಿ ನೀಡುವುದು ನಮ್ಮ ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು ಹಂತ ಹಂತವಾಗಿ ಕೆಲಸ ಮಾಡಲಾಗುತ್ತಿದೆ. ಜನರು ಸರ್ಕಾರಿ ಆಸ್ಪತ್ರೆಗೆ ಬಂದಾಗ ಅವರ ವಿಶ್ವಾಸ ಗಳಿಸುವಂತ ಕೆಲಸ ವೈದ್ಯಾಧಿಕಾರಿಗಳು ಮಾಡಬೇಕು ಎಂದರು.
ನೆಲಮಂಗಲದಲ್ಲಿ ರಾಷ್ಟ್ರ, ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಜೊತೆಗೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಅಗತ್ಯಕ್ಕೆ ವೈದ್ಯರು, ಸಿಬ್ಬಂದಿ, ಹಾಸಿಗೆಗಳ ಕೊರತೆ, ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು, ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಸ್ತುತ ಇರುವ ಆಂಬ್ಯುಲೆನ್ಸ್ ಸಾಕಾಗುವುದಿಲ್ಲ ಎಂಬ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು.ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಂತೆ ಅಗತ್ಯ ದಾಸ್ತಾನು ಶೇಖರಿಸಲು ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ. ಜೊತಗೆ ಸಿಬ್ಬಂದಿ ನೇಮಕ ಹಂತ ಹಂತವಾಗಿ ಮಾಡಲಾಗುವುದು ಎಂದು ಹೇಳಿದರು.
ನೂತನ ಸರ್ಕಾರಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಗರದ ಮುಖ್ಯಬೀದಿಯಲ್ಲಿನ ವಿಶ್ವೇಶ್ವರಪುರದ ಟಿಬಿಟಿಯನ್ ವಸತಿ ಸಮುಚ್ಚಯಕ್ಕೆ ತಾಲ್ಲೂಕು ಆಸ್ಪತ್ರೆಯನ್ನು ತಾತ್ಕಾಲಿಕ ಸ್ಥಳಾಂತರ ಮಾಡಲು ಉದ್ದೇಶಿಸಲಾಗಿದೆ. ಸರ್ಕಾರಿ ಆಸ್ಪತ್ರೆಯ ಕಟ್ಟಡ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿಯಿಂದ ಹಾಗೂ ಸ್ಥಳಾಂತರಗೊಂಡ ಕಾರಣ ಅಲ್ಲಿನ ಸಿಬ್ಬಂದಿ, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್, ನಗರಸಭಾಧ್ಯಕ್ಷ ಎನ್.ಗಣೇಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗೋವಿಂದರಾಜು, ಮಾಜಿ ಅಧ್ಯಕ್ಷ ನಾರಾಯಣಗೌಡ, ಎಂ.ಕೆ.ನಾಗರಾಜು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ನೆಲಮಂಗಲ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೂಮಿಪೂಜೆ ನೆರವೇರಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಅನುರಾಧ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್, ನಗರಸಭಾ ಅಧ್ಯಕ್ಷ ಎನ್.ಗಣೇಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗೋವಿಂದರಾಜು ಇತರರಿದ್ದರು.