11 ಕೇಂದ್ರಗಳಲ್ಲಿ ಇಂದು ಪಿಎಸ್‌ಐ ಪರೀಕ್ಷೆ

KannadaprabhaNewsNetwork | Published : Oct 3, 2024 1:29 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಅ.3 ರಂದು ಪಿಎಸ್‌ಐ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದಕ್ಕಾಗಿ ಜಿಲ್ಲೆಯ ಒಟ್ಟು ೧೧ ಕೇಂದ್ರಗಳಲ್ಲಿ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಯ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಅ.3 ರಂದು ಪಿಎಸ್‌ಐ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದಕ್ಕಾಗಿ ಜಿಲ್ಲೆಯ ಒಟ್ಟು ೧೧ ಕೇಂದ್ರಗಳಲ್ಲಿ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಯ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪಿಎಸ್‌ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು ೪,೯೨೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ ೧೦.೩೦ರಿಂದ ೧೨ರ ವರೆಗೆ ಪತ್ರಿಕೆ-೧ ಹಾಗೂ ಮಧ್ಯಾಹ್ನ ೧೨.೩೦ರಿಂದ ಮಧ್ಯಾಹ್ನ ೨ರವರೆಗೆ ಪತ್ರಿಕೆ-೨ರ ಪರೀಕ್ಷೆಗಳು ನಡೆಯಲಿವೆ. ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್‌ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಲೋಪ ಕಂಡು ಬಂದಲ್ಲಿ ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. ಯಾವುದೇ ಕಾರಣಕ್ಕೂ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ಅಭ್ಯರ್ಥಿಗಳ ಗುರುತಿನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಖಾರಿ ಸೋಮಲಿಂಗ ಗೆಣ್ಣುರ ಖಜಾನೆ ಇಲಾಖೆಯ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಉಪಸ್ಥಿತರಿದ್ದರು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ:

ಜಿಲ್ಲೆಯ ಒಟ್ಟು ೧೧ ಪರೀಕ್ಷಾ ಕೇಂದ್ರಗಳಲ್ಲಿ ಅ.೩ ರಂದು ನಡೆಯುವ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀ.ವ್ಯಾಪ್ತಿಯ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳು ನೀಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಯಾವುದೇ ಅಧಿಕಾರಿ ಸಿಬ್ಬಂದಿ ಮತ್ತು ಇತರರು ಎಲೆಕ್ಟ್ರಾನಿಕ್ ವಸ್ತುಗಳನ್ನು, ಸ್ಮಾರ್ಟ ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸಮೀಪದ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳನ್ನು ತೆರೆಯದಂತೆ ಆದೇಶಿಸಲಾಗಿದೆ.

Share this article