ಪಿಯು ಪರೀಕ್ಷೆ-2: ಕಟ್ಟುನಿಟ್ಟಾಗಿ ನಡೆಸಲು ಸೂಚನೆ

KannadaprabhaNewsNetwork |  
Published : Apr 23, 2025, 12:33 AM IST
ಪೂರ್ವಭಾವಿ ಸಭೆ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಏಪ್ರಿಲ್ 24 ರಿಂದ ಮೇ 8 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಕಟ್ಟುನಿಟ್ಟಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಜಿಲ್ಲೆಯಲ್ಲಿ ಏಪ್ರಿಲ್ 24 ರಿಂದ ಮೇ 8 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಕಟ್ಟುನಿಟ್ಟಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ-೧ನ್ನು ಯಾಶಸ್ವಿಯಾಗಿ ನಡೆಸಿದಂತೆ ಈ ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಬೇಕು ಎಂದು ಸೂಚಿಸಿದರಲ್ಲದೆ ಕಳೆದ ಮಾರ್ಚ್ 1 ರಿಂದ 20ರವರೆಗೆ ಜಿಲ್ಲೆಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ನ್ನು ಯಶಸ್ವಿಯಾಗಿ ನಡೆಸಿದ ಎಲ್ಲ ಅಧಿಕಾರಿ ಸಿಬ್ಬಂದಿಗಳಿಗೆ ಅಭಿನಂದನೆ ಹೇಳಿದರು.ಜಿಲ್ಲೆಯ ತುಮಕೂರು ತಾಲೂಕಿನಲ್ಲಿ 4 ಹಾಗೂ ಉಳಿದೆಲ್ಲ ತಾಲೂಕುಗಳಲ್ಲಿ ತಲಾ 1 ರಂತೆ ಒಟ್ಟು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಿಗಾ ವಹಿಸಬೇಕು. ನಿಗಧಿತ ಸಮಯಕ್ಕೆ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು. ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು. ನಿಯೋಜಿಸಿರುವ ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ಪರೀಕ್ಷಾ ಅಕ್ರಮವನ್ನು ತಡೆಯಲು ಮುಖ್ಯ ಅಧೀಕ್ಷಕರನ್ನು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಹಾಯಕರನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಿಸಲು ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ದಿನಗಳಂದು ನಿರಂತರ ವಿದ್ಯುತ್ ಸರಬರಾಜು ಮಾಡಬೇಕೆಂದು ಬೆಸ್ಕಾಂ ಇಲಾಖೆಗೆ ನಿರ್ದೇಶನ ನೀಡಿದರಲ್ಲದೆ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಬಾಲ ಗುರುಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 4079 ಹೊಸ ವಿದ್ಯಾರ್ಥಿಗಳು, 426 ಪುನರಾವರ್ತಿತ, 1 ಖಾಸಗಿ ಹಾಗೂ 2142 ಫಲಿತಾಂಶ ಸುಧಾರಣೆ ವಿದ್ಯಾರ್ಥಿಗಳು ಸೇರಿ ಒಟ್ಟು 6648 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.ಜಿಲ್ಲಾ ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣಿಸಲು ಹಾಗೂ ವಿತರಿಸಲು ಅಪರ ಜಿಲ್ಲಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಜಿಲ್ಲಾ ಖಜಾನೆ ಉಪನಿರ್ದೇಶಕರನ್ನೊಳಗೊಂಡ ತ್ರಿಸದಸ್ಯ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ