ಗದಗ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಕೇವಲ ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರು ಹಾಗೂ ಯುವಜನತೆ ಕೈಜೋಡಿಸಿದಾಗ ಮಾತ್ರ ಈ ಪಿಡುಗನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೆಯೆಯಲು ಸಾಧ್ಯ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ತಿಳಿಸಿದರು.
ಪ್ರತಿಯೊಬ್ಬರ ಜೀವನದಲ್ಲೂ ಡಾಕ್ಟರ್, ಎಂಜಿನಿಯರ್, ಪೊಲೀಸ್ ಅಥವಾ ಕ್ರೀಡಾಪಟು ಆಗಬೇಕೆಂಬ ದೊಡ್ಡ ಕನಸುಗಳಿರುತ್ತವೆ. ಆದರೆ, ಒಮ್ಮೆ ಡ್ರಗ್ಸ್‌ನಂತಹ ದುಶ್ಚಟಗಳಿಗೆ ಬಲಿಯಾದರೆ ಆ ಎಲ್ಲ ಕನಸುಗಳು ನುಚ್ಚುನೂರಾಗುತ್ತವೆ. ಹೀಗಾಗಿ ಯುವಜನತೆ ಯಾವುದೇ ಕಾರಣಕ್ಕೂ ಇಂತಹ ವ್ಯಸನಗಳಿಗೆ ಒಳಗಾಗದೇ ಸೇ ನೋ ಟು ಡ್ರಗ್ಸ್ ಎಂಬ ಪಣವನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದರು.
ಕಳೆದ ಒಂದು ವರ್ಷದಲ್ಲಿ ಜಿಲ್ಲಾ ಪೊಲೀಸರು ಮಾದಕ ವಸ್ತುಗಳ ತಡೆಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಒಟ್ಟು 27 ಪ್ರಕರಣಗಳನ್ನು ದಾಖಲಿಸಿ, 52 ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಇಡೀ ಉತ್ತರ ವಲಯದ 5 ಜಿಲ್ಲೆಗಳಲ್ಲೇ (ಬೆಳಗಾವಿ, ವಿಜಯಪುರ, ಗದಗ, ಧಾರವಾಡ ಮತ್ತು ಬಾಗಲಕೋಟೆ) ಪ್ರಥಮ ಬಾರಿಗೆ ಗದಗ ಜಿಲ್ಲೆಯಲ್ಲಿ ಪಿಟ್ ಎನ್‌ಡಿಪಿಎಸ್ ಕಾಯ್ದೆಯಡಿ ಈ ಅಭ್ಯಾಸ ಉಳ್ಳ ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿ, ಒಂದು ವರ್ಷದವರೆಗೆ ಜೈಲಿಗಟ್ಟುವ ಕಠಿಣ ಕ್ರಮ ಜರುಗಿಸಲಾಗಿದೆ ಎಂದರು.ಎಸ್ಪಿ ರೋಹನ ಜಗದೀಶ ಮಾತನಾಡಿ ಮಾದಕ ವಸ್ತುಗಳ ದುರ್ಬಳಕೆಯು ಕೇವಲ ಒಬ್ಬ ವ್ಯಕ್ತಿಯ ಮೇಲಷ್ಟೇ ಅಲ್ಲದೆ, ಅವರ ಇಡೀ ಕುಟುಂಬ ಹಾಗೂ ಯುವ ಪೀಳಿಗೆಯ ಭವಿಷ್ಯದ ಮೇಲೆ ಅತ್ಯಂತ ಗಂಭೀರವಾದ ಪರಿಣಾಮ ಬೀರುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಮಾದಕ ವ್ಯಸನದ ವಿರುದ್ಧ ಧ್ವನಿ ಎತ್ತಬೇಕಾಗಿದೆ ಎಂದರು.