ಬಳ್ಳಾರಿ: ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಸಂಪೂರ್ಣ ಪಾರದರ್ಶಕತೆಯಿಂದ ಕೂಡಿದೆ. ಇದರಲ್ಲಿ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಭಾಗಿತ್ವದ ಅಗತ್ಯವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು.ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಎಸ್‍ಐಆರ್ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಗಳ ವಿತರಣೆಯ ಕಾರ್ಯವು ಪ್ರಗತಿಯಲ್ಲಿದ್ದು, ಈಗಾಗಲೇ ಶೇ.97 ಪ್ರಗತಿ ಸಾಧಿಸಲಾಗಿದೆ ಎಂದರು.
ಗಣತಿ ನಮೂನೆಗಳನ್ನು ಭರ್ತಿ ಮಾಡುವಾಗ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲಗಳ ತಪ್ಪಿಸಲು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಫಾರ್ಮ್‍ಗಳಲ್ಲಿನ ಮೊದಲ ಭಾಗ ಹಾಗೂ ಎರಡನೇ ಭಾಗಗಳನ್ನು ಭರ್ತಿ ಮಾಡುವಾಗ ಆಗುವ ಸಾಮಾನ್ಯ ತಪ್ಪುಗಳನ್ನು ತಪ್ಪಿಸಲು ಬಿಎಲ್‍ಒ ಮತ್ತು ಬಿಎಲ್‍ಎಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಎಲ್ಲ ರಾಜಕೀಯ ಪಕ್ಷಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಅಧಿಕಾರಿ- ಸಿಬ್ಬಂದಿ ಹಾಗೂ ಜಿಲ್ಲೆಯ ಎಲ್ಲ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಪಾಲ್ಗೊಂಡಿದ್ದರು.