ಜನರ ತ್ವರಿತ ಸ್ಪಂದನೆಗೆ ಪ್ರಜಾಸೇವೆ: ಚಲುವರಾಯಸ್ವಾಮಿ

KannadaprabhaNewsNetwork |  
Published : Sep 06, 2026, 01:30 AM IST
5ಕೆಎಂಎನ್‌ಡಿ- 5ಮದ್ದೂರಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಎನ್‌.ಚಲುವರಾಯಸ್ವಾಮಿ, ಜಿಪಂ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್‌ ಮೀನಾ, ಜಿಲ್ಲಾಧಿಕಾರಿ ಡಾ.ಕುಮಾರ, ಶಾಸಕ ಕೆ.ಎಂ.ಉದಯ್‌ ಇತರರಿದ್ದರು. | Kannada Prabha

ಸಾರಾಂಶ

‘ಪ್ರಜಾ ಸೇವೆ’ ವ್ಯವಸ್ಥೆಯಡಿ ಐಎಎಸ್ ದರ್ಜೆಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಸಾರ್ವಜನಿಕರ ಕುಂದು-ಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಆಂದೋಲನವನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ‘ಪ್ರಜಾ ಸೇವೆ’ ಆಂದೋಲನ ಉದ್ಘಾಟಿಸಿ ಮಾತನಾಡಿ,

ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಕಚೇರಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಲು ‘ಪ್ರಜಾ ಸೇವೆ’ ಜಾರಿಗೆ ತರಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ರೀತಿಯ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು.

‘ಪ್ರಜಾ ಸೇವೆ’ ವ್ಯವಸ್ಥೆಯಡಿ ಐಎಎಸ್ ದರ್ಜೆಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಸಾರ್ವಜನಿಕರ ಕುಂದು-ಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಲಿದ್ದಾರೆ ಎಂದರು.

ಕಳೆದ ಮೂರು ವರ್ಷಗಳಿಂದ ಸಾರ್ವಜನಿಕರೊಂದಿಗೆ ನಿರಂತರವಾಗಿ ಸಭೆ ನಡೆಸಿ ಅಹವಾಲುಗಳನ್ನು ಸ್ವೀಕರಿಸುತ್ತಿದ್ದರೂ ಅರ್ಜಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಜಿಲ್ಲೆಯಲ್ಲಿ ಸುಮಾರು 24 ಸಾವಿರ ಸಾರ್ವಜನಿಕ ಅಹವಾಲುಗಳನ್ನು ಪರಿಹರಿಸಲಾಗಿದೆ. ಪ್ರತ್ಯೇಕ ವ್ಯವಸ್ಥೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮದ್ದೂರು ಪಟ್ಟಣದಲ್ಲಿ ಸುಮಾರು 137 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಜನರ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲೂ ‘ಪ್ರಜಾ ಸೇವೆ’ ನಡೆಸಲಾಗುವುದು. ಅಧಿಕಾರಿಗಳು ಅರ್ಜಿಗಳನ್ನು ಕೇವಲ ಸ್ವೀಕರಿಸುವುದಕ್ಕೆ ಸೀಮಿತವಾಗದೆ, ಕಾನೂನುಬದ್ಧವಾಗಿ ಸಾಧ್ಯವಿರುವ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಶಾಸಕ ಕೆ.ಎಂ.ಉದಯ್‌ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಅವರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದರು.

ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಜಿಪಂ ಸಿಇಒ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ
ಒಬ್ಬರ ರಕ್ತದಾನದಿಂದ ಮೂವರಿಗೆ ಜೀವದಾನ: ಡಾ.ಆನಂದ್‌