ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ನಿಡಘಟ್ಟ ಗ್ರಾಮದ ಸಂತೆ ಮೈದಾನದಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರು, ವಿದ್ಯಾರ್ಥಿಗಳು, ವಯೋವೃದ್ಧರು, ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಉದ್ದೇಶದಿಂದಲೇ ಸರ್ಕಾರ ಪ್ರತಿ ಹೋಬಳಿ ವ್ಯಾಪ್ತಿ ಹಾಗೂ ಗ್ರಾಪಂ ಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ ಎಂದರು.
ಈಗಾಗಲೇ ಬಂದಿರುವ ಹಲವು ಅರ್ಜಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡಲು ಕ್ರಮವಹಿಸಲಾಗಿದೆ. ಉಳಿದ ಅರ್ಜಿಗಳನ್ನು ಹಂತ ಹಂತವಾಗಿ ಪರಿಶೀಲಿಸಿ ಕ್ರಮ ವಹಿಸುವ ಜೊತೆಗೆ ಸರ್ಕಾರದ ಯೋಜನೆಗಳು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ದೊರೆಯಲು ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದರು.ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದಲೂ ಸರ್ಕಾರಿ ಸ್ಮಶಾನವಿಲ್ಲದೆ ಸ್ಥಳೀಯ ಸಾರ್ವಜನಿಕರಿಗೆ ತೊಡಕುಂಟಾಗಿದೆ. ಈ ಸಂಬಂಧ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಎನ್.ಎಂ.ಪ್ರಕಾಶ್ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಗ್ರಾಮದಲ್ಲಿ ಆಭಯ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವಂತೆ ಮತ್ತು ಗ್ರಾಮದಲ್ಲಿ ಸಮರ್ಪಕ ಕಸ ವಿಲೆವಾರಿಯಾಗದೆ ಎಲ್ಲೆಂದರಲ್ಲಿ ಅಶುಚಿತ್ವ ಮತ್ತು ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ. ದಿನನಿತ್ಯ ಒಂದಿಲ್ಲಒಂದು ಅವಘಡಗಳು ಜರುಗುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಕಂಡು ಕಾಣದೆ ಮೌನಕ್ಕೆ ಶರಣಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಶಿವಕುಮಾರ ಬಿರಾದಾರ ಒಂದು ವಾರದೊಳಗೆ ಸಂಬಂಧಿಸಿದ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ಅಗತ್ಯ ಕ್ರಮವಹಿಸುವ ಜತೆಗೆ ಸ್ಮಶಾನಕ್ಕೆ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಪಿಡಿಓಗೆ ಸೂಚನೆ ನೀಡುವುದಾಗಿ ಹೇಳಿದರು.