ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ತಿಳಿಸಿದರು.
ಜಿಲ್ಲೆಯ ತುಮಕೂರು ತಾಲೂಕಿನಲ್ಲಿ 13, ಕೊರಟಗೆರೆ ತಾಲೂಕಿನಲ್ಲಿ 1; ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲೂಕಿನಲ್ಲಿ ತಲಾ 2; ಕುಣಿಗಲ್, ತಿಪಟೂರು, ಪಾವಗಡ ತಾಲೂಕಿನಲ್ಲಿ ತಲಾ 3; ಶಿರಾ ತಾಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಕಾರ್ಯಕ್ಕೆ ನೇಮಕ ಮಾಡಿರುವ ಮಾರ್ಗಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು. ವರದಿ ಮಾಡಿಕೊಳ್ಳದ ಮಾರ್ಗಾಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 24444 ಹೊಸ ವಿದ್ಯಾರ್ಥಿಗಳು, 1348 ಪುನರಾವರ್ತಿತ ಹಾಗೂ 443 ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 26235 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹೊಸ ವಿದ್ಯಾರ್ಥಿಗಳ ಪೈಕಿ 10345 ವಿಜ್ಞಾನ ವಿಭಾಗ, 8780 ವಾಣಿಜ್ಯ ವಿಭಾಗ, 5319 ಕಲಾ ವಿಭಾಗ ಸೇರಿದಂತೆ ಒಟ್ಟು 24444 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಖಜಾನಾಧಿಕಾರಿ ಉಮಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.